ರೈತ ನಾಯಕ ಜಗ್‍ಜಿತ್ ಸಿಂಗ್ ದಲ್ಲೇವಾಲರ ಪ್ರಾಣ ರಕ್ಷಣೆಗೆ ಆಗ್ರಹ
ಸಂಯುಕ್ತ ಹೋರಾಟ-ಕರ್ನಾಟಕದಿಂದ ಧರಣಿ
ಮಂಡ್ಯ : ಐತಿಹಾಸಿಕ ದೆಹಲಿ ರೈತ ಹೋರಾಟದ ವಾಪಸ್ಸಾತಿ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಮರಣಾಂತ ಉಪವಾಸ ಕುಳಿತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲರ ಪ್ರಾಣ ಉಳಿಸಲು ತಕ್ಷಣ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ರೈತ, ದಲಿತ, ಕಾರ್ಮಿಕ, ಮಹಿಳಾ, ವಿದ್ಯಾರ್ಥಿ, ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಘೋಷಣೆ ಕೂಗಿ ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.
ರೈತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 48 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಲ್ಲೇವಾಲರ ಆರೋಗ್ಯ ನಿತ್ರಾಣಗೊಂಡು ಪ್ರಾಣ ಹೋಗುವ ಸನ್ನಿವೇಶ ಉಂಟಾಗಿದೆ. ಈ ರೈತ ನಾಯಕನ ಈ ಪರಿಸ್ಥಿತಿಗೆ ಕೇಂದ್ರ ಸರಕಾರವೇ ನೇರ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಗಜಿತ್ ಸಿಂಗ್ ದಲ್ಲೇವಾಲರ ಪ್ರಾಣ ಉಳಿಸಲು ಕ್ರಮ ವಹಿಸಬೇಕು. ದೆಹಲಿ ಗಡಿಗಳಲ್ಲಿ ಹೋರಾಟ ನಿರತ ರೈತ ಸಂಘಟನೆಗಳ ಜೊತೆ ಮಾತುಕತೆ ಆರಂಭಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು. ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ವಿದ್ಯುತ್ ಖಾಸಗೀಕರಣ ಮಾಡಬಾರದು. ಪಂಪ್‍ಸೆಟ್ ಮೀಟರೀಕರಣದ ಪ್ರಯತ್ನ ಕೂಡಲೇ ನಿಲ್ಲಿಸಬೇಕು. 60 ವರ್ಷ ದಾಟಿರುವ ಎಲ್ಲ ಕೃಷಿಕರಿಗೆ 5 ಸಾವಿರ ರೂ. ಮಾಸಿಕ ಪಿಂಚಣಿ ನೀಡಬೇಕು. ರೈತ ವಿರೋಧಿ, ಕರಾಳ ಕೃಷಿ ಕಾಯ್ದೆಯ ತದ್ರೂಪಾಗಿರುವ ಕೃಷಿ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ಧೋರಣೆ ವಾಪಸ್ಸು ಪಡೆಯಬೇಕು ಎಂದು ಅವರು ಆಗ್ರಹಿಸಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ಬಿ.ಬೊಮ್ಮೇಗೌಡ, ಜಿ.ಎ.ಶಂಕರ್, ಜನವಾದಿ ಮಹಿಳಾ ಸಂಘಟನೆಯ ದೇವಿ, ಸುಶೀಲ, ಕರ್ನಾಟಕ ಪ್ರಾಂತ ರೈತಸಂಘದ ಎನ್.ಎಲ್.ಭರತ್‍ರಾಜ್, ಟಿ.ಎಲ್.ಕೃಷ್ಣೇಗೌಡ, ಸಿಐಟಿಯುನ ಸಿ.ಕುಮಾರಿ ಸೇರಿದಂತೆ ಇತರ ಸಂಘಟನೆಗಳ ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸಿದ್ದರು.