ಮುಡಾ ಪ್ರಕರಣದ ತನಿಖೆ ಚುರುಕು | ಸ್ನೇಹಮಯಿ ಕೃಷ್ಣರನ್ನು ಕರೆತಂದು ಸ್ಥಳ ಮಹಜರು ನಡೆಸಿದ ಲೋಕಾಯುಕ್ತ
ಸಾಂದರ್ಭಿಕ ಚಿತ್ರ
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರದ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಹಿತ ಅವರ ಕುಟುಂಬದವರ ಮೇಲೆ ಎಫ್ಐಆರ್ ದಾಖಲು ಮಾಡಿಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮೇಲೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಸೋಮವಾರ ಲೋಕಾಯುಕ್ತ ನೊಟೀಸ್ ನೀಡಿತ್ತು. ಈ ಸಂಬಂಧ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ಕೆಸರೆ ನಿವೇಶನಗಳ ಬಳಿ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಕ್ರಮವಾಗಿ ಮುಡಾದಿಂದ 14 ನಿವೇಶನಗಳನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, "ನಾನು ಆರೋಪ ಮಾಡಿದ್ದರ ಬಗ್ಗೆ ಲೋಕಾಯುಕ್ತ ಪೊಲೀಸರ ಎಲ್ಲಾ ತನಿಖೆಗೂ ಸಿದ್ಧನಿದ್ದೇನೆ. ಅವರಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುತ್ತೇನೆ. ನನ್ನ ಬಳಿ ಇರುವ ದಾಖಲೆಗಳನ್ನು ನೀಡಿದ್ದು, ಇನ್ನು ಲೋಕಾಯುಕ್ತ ಅಧಿಕಾರಿಗಳು ಏನು ಕೇಳುತ್ತಾರೆ ಅವುಗಳು ನನ್ನ ಬಳಿ ಇದ್ದರೆ ನೀಡುತ್ತೇನೆ" ಎಂದು ಹೇಳಿದರು.