ನಂಜನಗೂಡು| ದೊಡ್ಡ ಕವಲಂತೆ ಗ್ರಾ.ಪಂ.ನಲ್ಲಿ ಶೌಚಾಲಯ ಹಣ ದುರ್ಬಳಕೆ: ಪಿಡಿಓ ಅಮಾನತು
ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕು ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಯಲ್ಲಿ ಶೌಚಾಲಯ ನಿರ್ಮಿಸದೆ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಪುರುಷೋತ್ತಮ್ ಅವರನ್ನು ಅಮಾನತುಗೊಳಿಸಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಮಡಿಕೇರಿ ತಾಲೂಕಿನ ಮಕಂದೂರು ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿರುವ ಪುರುಷೋತ್ತಮ್ ಅವರನ್ನು ಅಮಾನತು ಮಾಡಲಾಗಿದೆ. ಕೆಲವು ತಿಂಗಳ ಹಿಂದೆ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಯಲ್ಲಿ ಶೌಚಾಲಯ ನಿರ್ಮಿಸದೆ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಬಗ್ಗೆ ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕು ಪಂಚಾಯಿತಿ ಕಾರ್ಯಾಲಯದ ಅಧಿಕಾರಿಗಳನ್ನು ಒಳಗೊಂಡಂತೆ ತನಿಖಾ ತಂಡವನ್ನು ರಚನೆ ಮಾಡಲಾಗಿತ್ತು. ತನಿಖೆಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿರುವುದು ಸಾಬೀತಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
2020-21ರಿಂದ 2022-23ನೇ ಸಾಲಿನವರೆಗೆ 8 ಲಕ್ಷ ರೂ.ಗಳನ್ನು ನಿಯಮ ಬಾಹಿರವಾಗಿ ಬಿಲ್ ಕಲೆಕ್ಟರ್ ಪಿ.ಸೋಮಣ್ಣ ಅವರ ಖಾತೆಗೆ ವರ್ಗಾಯಿಸಲಾಗಿದೆ. ಮೂರು ಅಂಗನವಾಡಿಗಳ ಕಟ್ಟಡ ಹಾಗೂ ಸರ್ಕಾರಿ ಕನ್ನಡ ಶಾಲೆಯಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡದೆ ಬಿಲ್ ಮಾಡಿಕೊಂಡು 13.37 ಲಕ್ಷ ರೂ.ಗಳನ್ನು ದುರುಪಯೋಗ ಮಾಡಿಕೊಂಡಿರುವುದು ಕಂಡುಬಂದಿದೆ. ಅಲ್ಲದೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಿರುವ 6.08 ಲಕ್ಷ ಅನುದಾನ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಬಿಡುಗಡೆಯಾಗಿದ್ದ 8 ಲಕ್ಷ ರೂ.ಗಳನ್ನು ಸ್ವಂತ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಜೊತೆಗೆ, ಅಂಗನವಾಡಿ ಕಟ್ಟಡ ಮತ್ತು ಶಾಲಾ ಕಾಲೇಜುಗಳ ಶೌಚಾಲಯಗಳನ್ನು ನಿರ್ಮಾಣ ಮಾಡದೆ 13 ಲಕ್ಷ ರೂ.ಗಳನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ ಎಂದು ಆಯುಕ್ತರ ಆದೇಶದಲ್ಲಿ ಉಲ್ಲೇಖಿಸಲಾಗಿದೆ ತಿಳಿದು ಬಂದಿದೆ.