ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತ್ಯು
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಶಾಸಕ ಜಿ.ಟಿ.ದೇವೇಗೌಡ ಭೇಟಿ ಮಾಡಿದರು.
ಮೈಸೂರು,ಮೇ. 21: ಕಲುಷಿತ ನೀರು ಸೇವಿಸಿ ಯುವಕನೊಬ್ಬ ಮೃತಪಟ್ಟಿದ್ದು, ಅಸ್ವಸ್ಥಗೊಂಡ ಐವರು ಖಾಸಗಿ ಅಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕನಕರಾಜು (20) ಎಂದು ಗುರುತಿಸಲಾಗಿದೆ. ಕೆ.ಸಾಲುಂಡಿ ಗ್ರಾಮದಲ್ಲಿ ಸೋಮವಾರ ಕಲುಷಿತ ನೀರು ಸೇವಿಸಿ ಹಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಮೈಸೂರು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕನಕರಾಜು ಮೃತಪಟ್ಟಿದ್ದಾರೆ.
ಇನ್ನು ಮೂವರು ಮಕ್ಕಳು ಮತ್ತು ಇಬ್ನರು ಮಹಿಳೆರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗ್ರಾಮದಲ್ಲಿ ಇನ್ನೂ ಹಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಜ್ಞರ ತಂಡ ಸಹ ಆಗಮಿಸಿದ್ದು ಕಲುಷಿತ ನೀರಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡ ಭೇಟಿ:
ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಗೆ ಬರುವ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಮಂಗಳವಾರ ಬೆಳಿಗ್ಗೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ಮಾಡಿ ಧೈರ್ಯ ಹೇಳಿದ್ದಾರೆ.
ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ:
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ.
— Siddaramaiah (@siddaramaiah) May 21, 2024
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಮತ್ತೆ…
.