ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ : ಕೇಂದ್ರ ಸಚಿವ ಸಂಪುಟ ಅನುಮೋದನೆ
ಸಚಿವ ಅಶ್ವಿನಿ ವೈಷ್ಣವ್ | PC : PTI
ಹೊಸದಿಲ್ಲಿ : 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೆ ಯಾವುದೇ ಆದಾಯ ಮಿತಿಯಿಲ್ಲದೆ ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ಒದಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ತೆಗೆದುಕೊಂಡಿರುವ ಈ ನಿರ್ಧಾರದಿಂದ ದೇಶಾದ್ಯಂತ ಇರುವ 4.5 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ತಿಳಿಸಿದ್ದಾರೆ.
70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರೂ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಗೆ ಅರ್ಹರಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ವಿಶಿಷ್ಟ ಗುರುತಿನ ಚೀಟಿಯನ್ನು ಪಡೆಯಲಿದ್ದಾರೆ.
ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆ ಪಡೆದಿರುವ ಕುಟುಂಬಗಳು ಹೆಚ್ಚುವರಿಯಾಗಿ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆಯನ್ನು ನಿರ್ದಿಷ್ಟವಾಗಿ ತಮ್ಮ ಕುಟುಂಬಗಳ ಹಿರಿಯ ನಾಗರಿಕರಿಗೆ ಪಡೆಯಲಿವೆ.