ಬಿಜೆಪಿ ಐಟಿ ಸೆಲ್ ಗೆ ಸಂಬಂಧಿಸಿದ ವೀಡಿಯೊ ಮರು ಟ್ವೀಟ್ ಮಾಡಿ ತಪ್ಪು ಮಾಡಿದೆ : ಸುಪ್ರೀಂ ಕೋರ್ಟ್ ಗೆ ತಿಳಿಸಿದ ಕೇಜ್ರಿವಾಲ್
ಕೇಜ್ರಿವಾಲ್ | Photo: PTI
ಹೊಸದಿಲ್ಲಿ: ಬಿಜೆಪಿ ಐಟಿ ಸೆಲ್ಗೆ ಸಂಬಂಧಿಸಿ ಯುಟ್ಯೂಬರ್ ಧ್ರುವ ರಾಠಿ ಅವರು ಪ್ರಸಾರ ಮಾಡಿದ್ದ ಮಾನಹಾನಿಕರ ವೀಡಿಯೊವನ್ನು ಮರು ಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ಹೇಳಿದ್ದಾರೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಕೆಳ ನ್ಯಾಯಾಲಯ ತನಗೆ ನೀಡಿದ್ದ ಸಮನ್ಸ್ ಅನ್ನು ಎತ್ತಿ ಹಿಡಿದ ದಿಲ್ಲಿ ಉಚ್ಚ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ ವಿಚಾರಣೆ ನಡೆಸಿತು.
ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರ ವಿರುದ್ಧದ ಮಾನನಷ್ಟ ಪ್ರಕರಣವನ್ನು ಮಾರ್ಚ್ 11ರ ವರೆಗೆ ಕೈಗೆತ್ತಿಕೊಳ್ಳಬಾರದು ಎಂದು ಪೀಠ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತು.
ಯುಟ್ಯೂಬರ್ ಧ್ರುವ ರಾಠಿ ಅವರು 2018ರಲ್ಲಿ ಬಿಜೆಪಿ ಐಟಿ ಸೆಲ್ಗೆ ಸಂಬಂಧಿಸಿ ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಪೇಜ್ ಅಡ್ಮಿನ್ ‘ಬಿಜೆಪಿ ಐಟಿ ಸೆಲ್ನ ಭಾಗ-2’ರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರಾಠಿ ಅವರು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ಕೇಜ್ರಿವಾಲ್ ಅವರು ಮರು ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ತನ್ನ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ‘ಐ ಸಪೋರ್ಟ್ ನರೇಂದ್ರ ಮೋದಿ’ ಪೇಜ್ ಅಡ್ಮಿನ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದಿಲ್ಲಿ ವಿಚಾರಣಾ ನ್ಯಾಯಾಲಯ 2019ರಲ್ಲಿ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಕೇಜ್ರಿವಾಲ್ ಅವರು ಸಮನ್ಸ್ ರದ್ದುಪಡಿಸುವಂತೆ ಕೋರಿ ಸೆಷನ್ಸ್ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆಗೆ ಹಾಜರಾಗುವಂತೆ ದಿಲ್ಲಿ ನ್ಯಾಯಾಲಯ ನೀಡಿದ್ದ ಆದೇಶವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.