ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಚೆನ್ನೈಯಾದ್ಯಂತ ಶಾಲೆಗಳಿಗೆ ರಜೆ
Photo credit: PTI
ಚೆನ್ನೈ: ತಮಿಳುನಾಡಿನಲ್ಲಿ ಮಂಗಳವಾರ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದು, ಚೆನ್ನೈಯಲ್ಲಿ ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿದೆ.
ತಮಿಳುನಾಡಿನ ಹಲವು ಭಾಗಗಳಲ್ಲಿ ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಇಂದು ಚೆನ್ನೈನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಚೆನ್ನೈ ಜಿಲ್ಲಾಧಿಕಾರಿ ರಶ್ಮಿ ಸಿದ್ಧಾರ್ಥ್ ಝಾಗಡೆ ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.
ಚೆನ್ನೈ, ಚೆಂಗಲ್ಪಟ್ಟು, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ತಿರುವರೂರು, ಪುದುಕೊಟ್ಟೈ, ವಿಲ್ಲುಪ್ಪುರಂ, ರಾಮನಾಥಪುರಂ, ತಿರುವಳ್ಳೂರು ಸೇರಿದಂತೆ ತಮಿಳುನಾಡಿನ ಬಹುಪಾಲು ಜಿಲ್ಲೆಗಳಿಗೆ ಹವಾಮಾನ ಮುನ್ಸೂಚನಾ ಸಂಸ್ಥೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಪುದುಚೇರಿ ಮತ್ತು ಕಾರೈಕಾಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮಂಗಳವಾರ ಮತ್ತು ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ರಾಜ್ಯದ ರಾಜಧಾನಿ ಇಂದು ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 32-33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.