ದಿಲ್ಲಿ ವಿಧಾನಸಭಾ ಚುನಾವಣೆ | ಮುಖ್ಯಮಂತ್ರಿ ಅತಿಶಿ ವಿರುದ್ಧ ಅಲ್ಕಾ ಲಾಂಬಾರನ್ನು ಕಣಕ್ಕಿಳಿಸಿದ ಕಾಂಗ್ರೆಸ್
ಮುಖ್ಯಮಂತ್ರಿ ಅತಿಶಿ(PTI) , ಅಲ್ಕಾ ಲಂಬಾ (PC : X )
ಹೊಸದಿಲ್ಲಿ: ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅತಿಶಿ ಸ್ಪರ್ಧಿಸುತ್ತಿರುವ ಕಲ್ಕಜಿ ವಿಧಾನಸಭಾ ಕ್ಷೇತ್ರದಿಂದ ಅಲ್ಕಾ ಲಂಬಾರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
“ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಕಜಿ ವಿಧಾನಸಭಾ ಕ್ಷೇತ್ರದಿಂದ ಅಲ್ಕಾ ಲಂಬಾರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕೇಂದ್ರ ಚುನಾವಣಾ ಸಮಿತಿ ಅನುಮೋದನೆ ನೀಡಿದೆ” ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ಹೇಳಲಾಗಿದೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾದ ಅಲ್ಕಾ ಲಂಬಾ ಈ ಹಿಂದೆ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಲ್ಕಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅಲ್ಕಾ ಲಂಬಾ ಆಸಕ್ತಿ ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ಶೀಲಾ ದೀಕ್ಷಿತ್ ಹಾಗೂ ಸುಷ್ಮಾ ಸ್ವರಾಜ್ ನಂತರ ಅತಿಶಿ ದಿಲ್ಲಿಯ ಮೂರನೆ ಮಹಿಳಾ ಮುಖ್ಯಮಂತ್ರಿಯಾಗಿದ್ದು, ದಿಲ್ಲಿಯ ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ದಿಲ್ಲಿಯಲ್ಲಿ ಸತತ 15 ವರ್ಷಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್, ಕಳೆದ ಎರಡು ಅವಧಿಯ ಚುನಾವಣೆಯಲ್ಲಿ ದಿಲ್ಲಿಯ ಒಂದು ವಿಧಾನಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಲು ಸಫಲವಾಗಿಲ್ಲ.