ಚುನಾವಣಾ ಬಾಂಡ್ ಆದೇಶ ಪರಿಷ್ಕರಿಸಲು ಚುನಾವಣಾ ಆಯೋಗದ ಮನವಿ: ಇಂದು ವಿಚಾರಣೆ
ಹೊಸದಿಲ್ಲಿ: ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಾರ್ಚ್ 11ರಂದು ನೀಡಿದ ಆದೇಶದ ಕಾರ್ಯಾಚರಣೆ ಭಾಗದ ಪರಿಷ್ಕರಣೆಗೆ ಕೋರಿ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಪ್ರಕರಣದ ವಿಚಾರಣೆ ವೇಳೆ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ದಾಖಲೆಗಳ ಪ್ರತಿಯನ್ನು ಚುನಾವಣಾ ಆಯೋಗದ ಕಚೇರಿಯಲ್ಲಿ ಇಟ್ಟುಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ ತಾನು ಯಾವುದೇ ದಾಖಲೆಗಳನ್ನು ಇಟ್ಟುಕೊಂಡಿಲ್ಲ. ಆದ್ದರಿಂದ ಕೋರ್ಟ್ ನಿರ್ದೇಶನವನ್ನು ಪಾಲಿಸುವ ಸಲುವಾಗಿ ಅವುಗಳನ್ನು ವಾಪಾಸು ಮಾಡಬೇಕು ಎಂದು ಕೋರಿದೆ.
ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತರ ಮತ್ತು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟಿರುವ ಕ್ರಮವನ್ನು ಪ್ರಶ್ನಿಸಿ ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡಾ ಶುಕ್ರವಾರ ನಡೆಯಲಿದೆ. ಆದರೆ ಸುಪ್ರೀಂಕೋರ್ಟ್ ವೆಬ್ಸೈಟ್ ನಲ್ಲಿ ಇರುವ ಶುಕ್ರವಾರದ ಕಲಾಪ ಪಟ್ಟಿಯಲ್ಲಿ ಈ ಪ್ರಕರಣದ ಉಲ್ಲೇಖ ಇಲ್ಲ.
ಮಾರ್ಚ್ 12ರಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ, ಎನ್ ಜಿಓ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ, ಈ ಪ್ರಕರಣದ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು.