146 ವಿರೋಧ ಪಕ್ಷಗಳ ಸದಸ್ಯರ ಅಮಾನತು ವಿರೋಧಿಸಿ INDIA ಮೈತ್ರಿಕೂಟದ ಸಂಸದರ ಪ್ರತಿಭಟನೆ
Photo: ANI
ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 146 ಸದಸ್ಯರ ಅಮಾನತುಗೊಳಿಸಿದ ಕ್ರಮವನ್ನು ವಿರೋಧಿಸಿ ಇಂದು ದೇಶಾದ್ಯಂತ ವಿರೋಧ ಪಕ್ಷಗಳ INDIA ಮೈತ್ರಿಕೂಟದ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ದಿಲ್ಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಪ್ರಾರಂಭವಾಗಿದ್ದು, ಈ ಪ್ರತಿಭಟನೆಯನ್ನು ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ನಡೆಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರತಿಪಾದಿಸಿವೆ ಎಂದು indiatoday.in ವರದಿ ಮಾಡಿದೆ.
ಡಿ. 13ರಂದು ನಡೆದಿದ್ದ ಸಂಸತ್ ಭದ್ರತಾ ವೈಫಲ್ಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ, ಘೋಷಣೆಗಳನ್ನು ಕೂಗುವ ಮೂಲಕ ಲೋಕಸಭಾ ಹಾಗೂ ರಾಜ್ಯಸಭಾ ಕಾರ್ಯಕಲಾಪಗಳನ್ನು ಅಡ್ಡಿಪಡಿಸಿದ್ದಕ್ಕಾಗಿ ಡಿಸೆಂಬರ್ 14ರಿಂದ ವಿರೋಧ ಪಕ್ಷಗಳ ಸಂಸದರನ್ನು ಅಮಾನತುಗೊಳಿಸಲಾಗಿದೆ.
ಜೈರಾಮ್ ರಮೇಶ್, ಎ.ರಾಜಾ, ಗೌರವ್ ಗೊಗೊಯಿ, ಮುಕುಲ್ ವಾಸ್ನಿಕ್ ಹಾಗೂ ನಾಸೀರ್ ಹುಸೈನ್ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ವಿರೋಧ ಪಕ್ಷಗಳ ಸಂಸದರು ಜಂತರ್ ಮಂತರ್ ಎದುರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಅರವಿಂದರ್ ಸಿಂಗ್ ಲವ್ಲಿ, ಸಂಸತ್ತಿನಿಂದ ಸಂಸದರನ್ನು ಅಮಾನತುಗೊಳಿಸಿರುವುದು ಭಾರತದ ಪ್ರಜಾಪ್ರಭುತ್ವದ ಪಾಲಿಗೆ ಕಳಂಕವಾಗಿದೆ ಎಂದು ಕಿಡಿ ಕಾರಿದರು.
“ಸಂಸತ್ತಿನ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ 146 ವಿರೋಧ ಪಕ್ಷಗಳ ಸಂಸದರನ್ನು ಅಮಾನತುಗೊಳಿಸಿ, ಮೂರು ಅಪರಾಧ ಕಾನೂನು ಮಸೂದೆಗಳಿಗೆ ಅಂಗೀಕಾರ ಪಡೆಯಲಾಗಿದೆ. ಅವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲ ಹಾಗೂ ಇದು ದೇಶದ ಹಿತಾಸಕ್ತಿಯ ಪರವಾಗಿಲ್ಲ” ಎಂದು ಅವರು ವಾಗ್ದಾಳಿ ನಡೆಸಿದರು.
ಈ ನಡುವೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ನಾಯಕರು ಕೇರಳದ ರಾಜಭವನದ ಎದುರು ಪ್ರತಿಭಟಿಸಿದರೆ, ಹೈದರಾಬಾದ್ ನ ಇಂದಿರಾ ಪಾರ್ಕ್ ನಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಕರ್ನಾಟಕದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.