ಬಿಜೆಪಿಯ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ: ಕುಮಾರಸ್ವಾಮಿ
"ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕೆ?"
ಹೊಸದಿಲ್ಲಿ, ಜು.31: 'ಮುಡಾ' ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ ಪ್ರಶ್ನಿಸಿದ್ದಾರೆ?
ಪಾದಯಾತ್ರೆಯ ಬಗ್ಗೆ ಬಿಜೆಪಿ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದೆ. ಇದರಿಂದ ನೋವಾಗಿದೆ. ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಬೆಂಬಲ ನೀಡುತ್ತಿಲ್ಲ. ಜೆಡಿಎಸ್ ನಿಂದ ನೈತಿಕ ಬೆಂಬಲವೂ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಪ್ರೀತಂ ಗೌಡ ವಿರುದ್ಧ ಆಕ್ರೋಶ
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರೀತಮ್ ಗೌಡ ಯಾರು. ಹಾಸನದಲ್ಲಿ ಬೀದಿ ಬೀದಿಗಳಲ್ಲಿ ಪೆನ್ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ ಆತ. ಆತನ ಜತೆಗೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕೇಳಿದ್ದಾರೆ.
ಕೇರಳದಲ್ಲಿ ನೂರಾರು ಜನರ ಜೀವ ಹಾನಿಯಾಗಿದೆ. ರಾಜ್ಯದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಅದಲ್ಲದೇ ಇದು ಕೃಷಿ ಚಟುವಟಿಕೆ ಆಗಿರುವುದರಿಂದ ಪಾದಯಾತ್ರೆ ಸೂಕ್ತವಲ್ಲ ಎಂದು ಪಕ್ಷದ ಕೋರ್ ಕಮಿಟಿ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂದು ಕುಮಾಸ್ವಾಮಿ ತಿಳಿಸಿದ್ದಾರೆ.