ಮಧ್ಯಪ್ರದೇಶ| ಧಾರ್ಮಿಕ ಕಾರ್ಯಕ್ರಮದಲ್ಲಿ ಗೋಡೆ ಕುಸಿತ: 9 ಮಕ್ಕಳು ಮೃತ್ಯು
Photo: ANI
ಸಾಗರ್: ಗೋಡೆಯೊಂದು ಕುಸಿದು ಬಿದ್ದಿದ್ದರಿಂದ 9 ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಗ್ರಾಮವೊಂದರಲ್ಲಿ ರವಿವಾರ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆಯು ರೆಹ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಪುರ್ ಗ್ರಾಮದಲ್ಲಿ ಆಯೋಜನೆಗೊಂಡಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಾಗರ್ ಜಿಲ್ಲೆಯ ಉಪ ವಿಭಾಗಾಧಿಕಾರಿ ವಿರೇಂದ್ರ ಸಿಂಗ್ ರಾವತ್, ಇಲ್ಲಿಯವರೆಗೆ ಸ್ವೀಕರಿಸಿರುವ ಮಾಹಿತಿಯ ಪ್ರಕಾರ, ಶಾಪುರ್ ನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಸಂಭವಿಸಿದ ಗೋಡೆ ಕುಸಿತ ಘಟನೆಯಲ್ಲಿ 10ರಿಂದ 15 ವರ್ಷದೊಳಗಿನ ಒಂಬತ್ತು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.
“ಕೆಲವು ಮಕ್ಕಳು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಿಂದ ಎಲ್ಲ ಅವಶೇಷಗಳನ್ನೂ ತೆರವುಗೊಳಿಸಲಾಗಿದೆ” ಎಂದು ಜಿಲ್ಲಾಧಿಕಾರಿ ದೀಪಕ್ ಆರ್ಯ ತಿಳಿಸಿದ್ದಾರೆ.
ಮಕ್ಕಳ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, “ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ. ತಮ್ಮ ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಂತಾಪಗಳು. ಮೃತ ಮಕ್ಕಳ ಕುಟುಂಬಗಳಿಗೆ ಸರಕಾರವು ತಲಾ ರೂ. 4 ಲಕ್ಷ ನೆರವು ಒದಗಿಸಲಿದೆ” ಎಂದು ಭರವಸೆ ನೀಡಿದ್ದಾರೆ.