ಮಹಾರಾಷ್ಟ್ರ: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ
ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಿಸುತ್ತಿರುವ ಆಸ್ಪತ್ರೆ ಸಿಬ್ಬಂದಿ (Photo: indiatoday.in)
ಮುಂಬೈ: ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ತೀವ್ರ ಆಕ್ರೋಶ ಹೆಚ್ಚುತ್ತಿರುವ ನಡುವೆ, ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ವರದಿಯಾಗಿದೆ. ಘಟನೆಯಲ್ಲಿ ಸಂತ್ರಸ್ತೆ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ನರ್ಸಿಂಗ್ ವಿದ್ಯಾರ್ಥಿನಿಯು ಆಟೋ ರಿಕ್ಷಾದಲ್ಲಿ ಕಾಲೇಜಿನಿಂದ ಹಿಂತಿರುಗುತ್ತಿದ್ದಾಗ ಚಾಲಕ ಆಕೆಗೆ ಮತ್ತು ಬರಿಸುವ ಪಾನೀಯ ಬೆರೆಸಿದ ನೀರನ್ನು ನೀಡಿದ್ದಾನೆ. ಆಕೆ ಪ್ರಜ್ಞೆ ಕಳೆದುಕೊಂಡ ನಂತರ ಚಾಲಕ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ನ್ಯೂಸ್ 18 ವರದಿ ಮಾಡಿದೆ.
ಯುವತಿಗೆ ಪ್ರಜ್ಞೆ ಬಂದ ನಂತರ ಆಕೆ ತನ್ನ ಮನೆಯವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಪೊಲೀಸರು ಆರೋಪಿ ಆಟೋ ಚಾಲಕನನ್ನು ಹುಡುಕುತ್ತಿದ್ದು, ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ರತ್ನಗಿರಿಯ ಹಲವಾರು ಭಾಗಗಳಲ್ಲಿ ಸಂಚಾರಕ್ಕೆ ತಡೆಯೊಡ್ಡಿದರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದು, ಪ್ರತಿಭಟನಾಕಾರರು ಶಾಂತಿ ಕಾಪಾಡುವಂತೆ ಹೇಳಿದ್ದಾರೆ.