ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ : ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ ಎಂದ ಕೇರಳ ಸಿಎಂ
ಪಿಣರಾಯಿ ವಿಜಯನ್ | PC : PTI
ತಿರುವನಂತಪುರಂ: ಮುಸ್ಲಿಮರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೀಡಿರುವ ವಿವಾದಾತ್ಮಕ ಹೇಳಿಕೆಯ ಕುರಿತು ಚುನಾವಣಾ ಆಯೋಗವು ನಿಷ್ಪಕ್ಷಪಾತ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಂಗಳವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದರು.
ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಿಣರಾಯಿ ವಿಜಯನ್, ಇದು ಚುನಾವಣಾ ಆಯೋಗವು ತಕ್ಷಣವೇ ಕ್ರಮ ಕೈಗೊಳ್ಳಬೇಕಾದ ಸಂದರ್ಭವಾಗಿದ್ದರೂ, ಈ ವಿಷಯದ ಕುರಿತು ಅದು ಇದುವರೆಗೂ ಮೌನಕ್ಕೆ ಜಾರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಇದು ದುರದೃಷ್ಟಕರ. ತಾನು ನಿಷ್ಪಕ್ಷಪಾತಿ ಎಂದು ಚುನಾವಣಾ ಆಯೋಗ ಪ್ರದರ್ಶಿಸಬೇಕಿತ್ತು. ಅದು ತಕ್ಷಣವೇ ಕ್ರಮ ಕೈಗೊಳ್ಳಬೇಕಿತ್ತು” ಎಂದು ಅವರು ಅಭಿಪ್ರಾಯ ಪಟ್ಟರು.
ಇದು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾದ ವಿಷಯವಾಗಿದೆ ಎಂದೂ ಅವರು ಹೇಳಿದರು.
ಇದೇ ವೇಳೆ, ಪ್ರಧಾನಿಯ ಇಂತಹ ಹೇಳಿಕೆಗಳಿಂದ ದೇಶಾದ್ಯಂತ ಬಿಜೆಪಿ ವಿರೋಧಿ ಭಾವನೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದ್ದು, ಇದರಿಂದ ಬಿಜೆಪಿ ಮತ್ತಷ್ಟು ಏಕಾಂಗಿಯಾಗಲಿದೆ ಎಂದೂ ಅವರು ಪ್ರತಿಪಾದಿಸಿದರು.
ರವಿವಾರ ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದ್ದ ಚುನಾವಣಾ ಸಮಾವೇಶವೊಂದರಲ್ಲಿ ಮಾತನಾಡಿದ್ದ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷವೇನಾದರೂ ಅಧಿಕಾರಕ್ಕೆ ಬಂದರೆ, ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.