ಮನೀಶ್ ಸಿಸೋಡಿಯಾರನ್ನು ಎಳೆದಾಡಿದ್ದ ಪೊಲೀಸ್ ಅಧಿಕಾರಿ ತನ್ನೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ: ಕೇಜ್ರಿವಾಲ್ ಆರೋಪ
ಅರವಿಂದ್ ಕೇಜ್ರಿವಾಲ್ | Photo: PTI
ಹೊಸದಿಲ್ಲಿ: ಸುಮಾರು ಒಂದು ವರ್ಷದಿಂದ ಸೆರೆವಾಸದಲ್ಲಿರುವ ಮಾಜಿ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ದೈಹಿಕ ಹಲ್ಲೆ ನಡೆಸಿರುವ ಪೊಲೀಸರು, ಅವರೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ದಿಲ್ಲಿ ಮುಖ್ಯಮಂತ್ರಿ ಆರೋಪಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ India Today ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಾರ್ಚ್ 28ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಲಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಹಾಯಕ ಪೊಲೀಸ್ ಆಯುಕ್ತ ಎ.ಕೆ.ಸಿಂಗ್ ಅವರನ್ನು ತಮ್ಮ ಭದ್ರತಾ ಹೊಣೆಯಿಂದ ಬಿಡುಗಡೆ ಮಾಡಬೇಕು ಎಂದು ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ತಾನು ವಿಚಾರಣೆಗೆ ಹಾಜರಾದಾಗ ಸದರಿ ಪೊಲೀಸ್ ಅಧಿಕಾರಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಬೆಳಗ್ಗೆ ನ್ಯಾಯಾಲಯದ ವಿಚಾರಣೆಗೆ ಕರೆ ತಂದಾಗ ಎ.ಕೆ.ಸಿಂಗ್ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥರೂ ಆದ ಅರವಿಂದ್ ಕೇಜ್ರಿವಾಲ್ ದೂರಿದ್ದಾರೆ.
ಮುನ್ನ ಗುರುವಾರ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ದಿಲ್ಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ತಮ್ಮ ನಿವಾಸದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು.