ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಆರೋಪಿ ಸಂಜಯ್ ರಾಯ್
ಕೋಲ್ಕತ್ತಾ: ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಕೋಲ್ಕತ್ತಾದ ಸೀಲ್ಡಾ ನ್ಯಾಯಾಲಯ ಆದೇಶವನ್ನು ನೀಡಿದೆ.
ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕೋಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹ ಆಸ್ಪತ್ರೆಯ ಸೆಮಿನಾರ್ ರೂಂನಲ್ಲಿ ಪತ್ತೆಯಾಗಿತ್ತು. ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಸಂಜಯ್ ರಾಯ್ ಗೆ ಬಂಧಿಸಲಾಗಿತ್ತು. ಆರ್ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಪಶ್ಚಿಮ ಬಂಗಾಳದ ಸೀಲ್ಡಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸಿಬಿಐ ಸಂಜಯ್ ರಾಯ್ ಏಕೈಕ ಆರೋಪಿ ಎಂದು ಉಲ್ಲೇಖಿಸಿತ್ತು. ಅಲ್ಲದೆ, ಸಾಮೂಹಿಕ ಅತ್ಯಾಚಾರದ ಸಾಧ್ಯತೆಯನ್ನು ತಳ್ಳಿ ಹಾಕಿತ್ತು.
ತನ್ನ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದ ಸಂಜಯ್ ರಾಯ್, ನಾನು ಅಮಾಯಕನಾಗಿದ್ದು, ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿದ್ದ. ಆದರೆ ಸೀಲ್ಡಾದ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಅನಿರ್ಬನ್ ದಾಸ್ ಪ್ರಕರಣದಲ್ಲಿ ಸಂಜಯ್ ರಾಯ್ ದೋಷಿ ಎಂದು ತೀರ್ಪು ನೀಡಿದ್ದರು.
ಸೋಮವಾರ ಮಧ್ಯಾಹ್ನ 12:30ರ ಸುಮಾರಿಗೆ ಸಂಜಯ್ ರಾಯ್ ಹೇಳಿಕೆಯನ್ನು ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಸಂತ್ರಸ್ತೆಯ ಕುಟುಂಬಸ್ಥರ ಪರ ವಕೀಲರು, ʼಗರಿಷ್ಠ ಶಿಕ್ಷೆಯಾಗಿ ಮರಣದಂಡನೆಯನ್ನು ನಾವು ಬಯಸುತ್ತೇವೆʼ ಎಂದು ಕೋರ್ಟ್ ನಲ್ಲಿ ವಾದಿಸಿದ್ದರು.