ಸಂಭಾಲ್ ಹಿಂಸಾಚಾರ: ಮೃತರ ಸಂಖ್ಯೆ 4ಕ್ಕೆ ಏರಿಕೆ, ಇಂಟರ್ ನೆಟ್ ಸ್ಥಗಿತ
Photo credit: PTI
ಉತ್ತರಪ್ರದೇಶ: ಸಂಭಾಲ್ ನ ಜಾಮಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆಯಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಹಿಂಸಾಚಾರದ ಹಿನ್ನೆಲೆ ಜಿಲ್ಲಾಡಳಿತ ಸಂಭಾಲ್ ನಲ್ಲಿ 24 ಗಂಟೆಗಳ ಕಾಲ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ ಮತ್ತು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ನ.30ರವರೆಗೆ ಸಂಭಾಲ್ ಗೆ ಹೊರಗಿನವರು ಅಧಿಕಾರಿಗಳ ಆದೇಶವಿಲ್ಲದೆ ಸಂಭಾಲ್ ಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮೊಘಲ್ ಚಕ್ರವರ್ತಿ ಬಾಬರ್ 1529ರಲ್ಲಿ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಿದ್ದಾರೆಂದು ವಕೀಲ ವಿಷ್ಣು ಶಂಕರ್ ಜೈನ್, ಸಂಭಾಲ್ ನ ಕೇಲಾ ದೇವಿ ದೇವಸ್ಥಾನದ ರಿಷಿರಾಜ್ ಗಿರಿ ಸೇರಿದಂತೆ ಐವರು ಫಿರ್ಯಾದಿಗಳು ಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯಲ್ಲಿ ಜಾಮಾ ಮಸೀದಿಯನ್ನು ಹರಿ ಹರ್ ಮಂದಿರ ಎಂದು ವಾದಿಸಿದ್ದರು. ಇದರಿಂದಾಗಿ ಮಸೀದಿಯ ಆವರಣದಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಜಾಮಾ ಮಸೀದಿಯ ಆವರಣದಲ್ಲಿ ನವೆಂಬರ್ 19ರಂದು ಸಮೀಕ್ಷೆ ನಡೆಸಲಾಗಿತ್ತು. ಆದರೆ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಪ್ರಾರ್ಥನೆಗಳಿಗೆ ಅಡ್ಡಿಯಾಗುವುದನ್ನು ತಪ್ಪಿಸಲು ರವಿವಾರ ಬೆಳಿಗ್ಗೆ ಸಮೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿತ್ತು. ನಿಗದಿಯಂತೆ ಸಮೀಕ್ಷೆಗೆ ಅಧಿಕಾರಿಗಳು ಮಸೀದಿಗೆ ಆಗಮಿಸಿದಾಗ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಹಿಂಸಾಚಾರಕ್ಕೆ ತಿರುಗಿದೆ.
ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದೆ ಎನ್ನಲಾಗಿದೆ.
ಈ ಘರ್ಷಣೆಯಲ್ಲಿ ನೌಮಾನ್, ಬಿಲಾಲ್ ಹಾಗೂ ನಯೀಂ ಎಂಬವರು ಮೃತಪಟ್ಟಿದ್ದರು. ಇಬ್ಬರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಮೂರನೇ ವ್ಯಕ್ತಿಯ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ, ಮರಣೋತ್ತರ ಪರೀಕ್ಷೆಯ ನಂತರ ಈ ಕುರಿತು ಸ್ಪಷ್ಟ ಕಾರಣ ತಿಳಿದು ಬರಲಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಮಾಹಿತಿ ನೀಡಿದ್ದಾರೆ. ಇಂದು ಮತ್ತೋರ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಆದರೆ ಮೃತರ ಹೆಸರು ಬಹಿರಂಗವಾಗಿಲ್ಲ.
ಹಿಂಸಾಚಾರಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸೇರಿದಂತೆ 21 ಜನರನ್ನು ಬಂಧಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ, ಹಿಂಸಾಚಾರದ ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯಿದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಮೀಕ್ಷೆಯ ಹೆಸರಿನಲ್ಲಿ ನಡೆಸಿದ ಉದ್ವಿಗ್ನತೆಯ ಹಿಂದಿನ ಪಿತೂರಿ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.