ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ | ಏಳು ಮಂದಿ ಮೃತ್ಯು
PC : X/@saravananwriter
ದಿಂಡುಗಲ್ : ತಮಿಳುನಾಡಿನ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಮಗು, ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸುವ ಕಾರ್ಯವೂ ನಡೆಯುತ್ತಿದೆ.
ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ಸೇವೆಗೆ ಬಳಸಿಕೊಳ್ಳಲಾಗಿದೆ. ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗೆ ವರ್ಗಾಯಿಸಲು ಹತ್ತಕ್ಕೂ ಹೆಚ್ಚು ಆಂಬ್ಯುಲೆನ್ಸ್ಗಳನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳ, ಪೊಲೀಸರು ಘಟನೆಯಿಂದ ಗಾಬರಿಯಾಗಿ ರಕ್ಷಣೆ ಪಡೆಯಲು ಲಿಫ್ಟ್ ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿ ದಿಂಡುಗಲ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಘಟನೆ ನಡೆದ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಎಂ.ಎನ್.ಪೂಂಗೋಡಿ ಹಾಗೂ ಪಳನಿ ಶಾಸಕ ಐ.ಬಿ.ಸೆಂಥಿಲ್ ಕುಮಾರ್ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಯ ರಿಸಿಪ್ಷನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಂಕಿಯ ಜ್ವಾಲೆಯು ಇತರ ಮಹಡಿಗಳಿಗೆ ವೇಗವಾಗಿ ಹರಡಿ ಇಡೀ ಕಟ್ಟಡವನ್ನು ಆವರಿಸಿತು ಎನ್ನಲಾಗಿದೆ.
ಆಸ್ಪತ್ರೆಯಲ್ಲಿ ದಟ್ಟವಾದ ಹೊಗೆ ತುಂಬಿದ್ದರಿಂದ ಉಸಿರುಗಟ್ಟುವಿಕೆಯಿಂದ 7 ಮಂದಿ ಮೃತಪಟ್ಟರು ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ತಿಳಿಸಿದ್ದಾರೆ.
Six persons including a child were killed after a fire broke out in a private hospital in Dindigul on Thursday night. @xpresstn pic.twitter.com/e7OwbSrT3C
— Saravanan mp (@saravananwriter) December 12, 2024