ವಿದ್ಯಾರ್ಥಿನಿಯ ಹಿಜಾಬ್ ಹರಿದ ಶಿಕ್ಷಕನ ಬಂಧನ
ಸಾಂದರ್ಭಿಕ ಚಿತ್ರ
ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೊರ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ತರಗತಿಯಲ್ಲೇ ಬಲವಂತವಾಗಿ ವಿದ್ಯಾರ್ಥಿನಿಯೊಬ್ಬಳ ಹಿಜಾಬ್ ತೆಗೆಸಿ ಅದನ್ನು ಹರಿದು ಹಾಕಿದ ಆರೋಪದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ.
ವಿದ್ಯಾರ್ಥಿನಿ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಿರವಸ್ತ್ರವನ್ನು ಧರಿಸಿದ್ದಕ್ಕೆ ಈ ಶಿಕ್ಷಕ ನಮ್ಮನ್ನು ಗುರಿ ಮಾಡಿ ಪದೇ ಪದೇ ಕಿರುಕುಳ ನೀಡುತ್ತಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.
ಪದೇ ಪದೇ ಕಿರುಕುಳ ನೀಡುತ್ತಿರುವ ಬಗ್ಗೆ ಶಾಲೆಯ ಪ್ರಾಚಾರ್ಯರು ಮತ್ತು ಇತರ ಬೋಧಕ ಸಿಬ್ಬಂದಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ. ಈ ಸಮಸ್ಯೆಯ ಬಗ್ಗೆ ತಂದೆಯ ಜತೆ ಚರ್ಚಿಸಿರುವ ವಿದ್ಯಾರ್ಥಿನಿ, ಈ ಸಮಸ್ಯೆ ಬಗೆಹರಿಸುವ ಸಲುವಾಗಿ ತಾಯಿ ಶಾಲೆಗೆ ಭೇಟಿ ನೀಡಿದ ವೇಳೆ ನಡೆದ ಘಟನೆಯನ್ನು ವಿವರಿಸಿದ್ದಾಳೆ.
"ಶಿಕ್ಷಕ ಉದ್ದೇಶಪೂರ್ವಕವಾಗಿಯೇ ಜಗಳ ಮಾಡಿದ್ದಾರೆ. ಶಾಲೆಯ ಆವರಣದಲ್ಲಿ ನನ್ನ ತಾಯಿ ಕಾಣಿಸಿಕೊಂಡಿದ್ದನ್ನು ಪ್ರಶ್ನಿಸಿದ್ದಲ್ಲದೇ ಏರುಧ್ವನಿಯಲ್ಲಿ ಮಾತನಾಡಿದ್ದಾರೆ" ಎಂದು ಆರೋಪಿಸಲಾಗಿದೆ. ಈ ದೂರಿನ ಹಿನ್ನೆಲೆಯಲ್ಲಿ ಶಿಕ್ಷಕನ ವಿರುದ್ಧ ಭಾರತೀಯ ದಂಡಸಂಹಿತೆ ಸೆಕ್ಷನ್ 354 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 9/10ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ.