ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ರಾಷ್ಟ್ರಮಟ್ಟದಲ್ಲಿ ಜಾಗೃತಿ ಅಭಿಯಾನ ಕೈಗೊಳ್ಳಲು ಮುಂದಾದ ಬಿಜೆಪಿ

Photo | ANI
ಹೊಸದಿಲ್ಲಿ : ನೂತನ ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಎಪ್ರಿಲ್ 20ರಿಂದ ಮೇ5ರವರೆಗೆ ಜಾಗೃತಿ ಅಭಿಯಾನವನ್ನು ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.
ವಕ್ಫ್ ಮಸೂದೆ ಕುರಿತು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮಾಡುತ್ತಿರುವ ಟೀಕೆಗೆ ಪ್ರತ್ಯುತ್ತರವಾಗಿ ಬಿಜೆಪಿ ಈ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ದಿಲ್ಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ತುಷ್ಟೀಕರಣ ರಾಜಕೀಯದಲ್ಲಿ ತೊಡಗಿವೆ. ಮುಸ್ಲಿಂ ಸಮುದಾಯವನ್ನು ದಾರಿ ತಪ್ಪಿಸುತ್ತಿವೆ. ಈ ಸುಳ್ಳುಗಳನ್ನು ಬಹಿರಂಗಪಡಿಸಲು, ಕಾನೂನಿನ ನಿಜವಾದ ಉದ್ದೇಶ ಮತ್ತು ಅನುಕೂಲಗಳನ್ನು ಸ್ಪಷ್ಟಪಡಿಸಲು ಬಿಜೆಪಿ ಕಾರ್ಯಕರ್ತರು ಮುಸ್ಲಿಂ ಸಹೋದರ- ಸಹೋದರಿಯರನ್ನು ಭೇಟಿಯಾಗಿ ಅರಿವು ಮೂಡಿಸಲಿದ್ದಾರೆ ಎಂದು ಹೇಳಿದರು.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕೂಡ ಕಾರ್ಯಾಗಾರದಲ್ಲಿ ಭಾಗವಹಿಸಿ ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಮಾಹಿತಿ ನೀಡಿದರು. ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಇರುವುದರ ಹಿಂದೆ ಆಸ್ತಿಗಳ ನಿರ್ವಹಣೆಯ ಉದ್ದೇಶವಿದೆಯೇ ಹೊರತು, ಧರ್ಮಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.