ರಾಯಚೂರು: ನೂತನ ಟೇಬಲ್ ಟೆನಿಸ್ ಕೋರ್ಟ್ ಕಟ್ಟಡ ಲೋಕಾರ್ಪಣೆ

ರಾಯಚೂರು, ಎ.12: ರಾಯಚೂರ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಟೇಬಲ್ ಟೆನಿಸ್ ಕೋರ್ಟ್ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಲೋಕಾರ್ಪಣೆ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಎ.12ರಂದು ನಡೆದ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹಾಗೂ ಇತರರೊಂದಿಗೆ ಸಚಿವರು ರಿಬ್ಬನ್ ಕತ್ತರಿಸುವ ಮೂಲಕ ಕಟ್ಟಡವನ್ನು ಜನಸೇವೆಗೆ ನೀಡಿದರು.
2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಯೋಜನೆಯಡಿಯಲ್ಲಿ ಅಂದಾಜು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿತಿ ಕೇಂದ್ರದಿಂದ ಕಟ್ಟಡವನ್ನು ನಿರ್ಮಿಸಲಾಗಿದೆ.
ಟೆನ್ನಿಸ್ ಆಡಿದ ಸಚಿವರು:
ಲೋಕಾರ್ಪಣೆ ಬಳಿಕ ಸಚಿವ ಶರಣಪ್ರಕಾಶ ಪಾಟೀಲ ಮತ್ತು ಎನ್.ಎಸ್.ಬೋಸರಾಜು ಟೆಬಲ್ ಟೆನಿಸ್ ಆಡಿ ಗಮನಸೆಳೆದರು.
ಸಮಾರಂಭದಲ್ಲಿ ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷ ನರಸಮ್ಮ ನರಸಿಂಹಲು ಮಾಡಗಿರಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೃಷ್ಣ ಶಾವಂತಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಣದೀಪ್ ಡಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್., ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಎಂ.ಸುಂದರೇಶ ಬಾಬು, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಕ್ಯಾಷೊಟಕ್ ನಿರ್ಮಿತಿ ಯೋಜನಾ ವ್ಯವಸ್ಥಾಪಕ ವೆಂಕಟೇಶಸಿಂಗ್ ಹಜಾರೆ, ಇಂಜಿನಿಯರ್ ಬಸವರಾಜ ಹಿರೇಮಠ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಇದ್ದರು.
ಇದೆ ವೇಳೆ ಟೆಬಲ್ ಟೆನಿಸ್ ಅಸೋಸಿಯೇಶನ್ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.