ರಾಯಚೂರು | ಎಸೆಸೆಲ್ಸಿ ಪರೀಕ್ಷೆ-1ರ ಪೂರ್ವಭಾವಿ ಸಭೆ
ಎಸೆಸೆಲ್ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ ; ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು : ಜಿಲ್ಲೆಯಲ್ಲಿ ಮಾ. 21ರಿಂದ ಆರಂಭವಾಗುವ ಎಸೆಸೆಲ್ಸಿ ಪರೀಕ್ಷೆ-1 ಅತ್ಯಂತ ಪಾರದರ್ಶಕವಾಗಿ ಹಾಗೂ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಹೇಳಿದರು.
ಮಾ.17ರ ಸೋಮವಾರ ದಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ನಿಯೋಜಿತರು ಪಾಲಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲ ಸೌಕರ್ಯ, ಸಿ.ಸಿ.ಟಿವಿ ಕಲ್ಪಿಸುವುದನ್ನು ಮೇಲಾಧಿಕಾರಿಗಳು ಖಾತರಿಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೆಬ್ಕಾಸ್ಟಿಂಗ್ ಕಡ್ಡಾಯವಾಗಿದ್ದು, ವೆಬ್ ಕಾಸ್ಟಿಂಗ್ ಗೆ ಅಗತ್ಯವಿರುವ ತಾಂತ್ರಿಕ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷೆ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ತಲುಪಬೇಕು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಸಮಯದಲ್ಲಿ ಅನ್ಯ ವ್ಯಕ್ತಿಗಳು, ಸಂಬಂಧಪಡದವರು, ಮಾಧ್ಯಮಗಳಿಗೆ ಪ್ರವೇಶವಿರುವುದಿಲ್ಲ. ವಿದ್ಯಾರ್ಥಿಗಳು ಶಾಂತ ರೀತಿಯಿಂದ ಮುಕ್ತವಾಗಿ ಪರೀಕ್ಷೆ ಬರೆಯುವಂತಹ ವಾತಾವರಣ ಇರಬೇಕು. ಪರೀಕ್ಷಾ ಕೇಂದ್ರಗಳ ಸುತ್ತ 144 ಕಲಂ ಜಾರಿ ಇರುತ್ತದೆ. ನಿಯೋಜಿತರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕೆಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಬಿ.ಬಡಿಗೇರ ಅವರು ಪರೀಕ್ಷಾ ಸಿದ್ಧತೆ, ಪರೀಕ್ಷಾ ಕೇಂದ್ರಗಳಲ್ಲಿ ಸೌಕರ್ಯ, ಸಿ.ಸಿ.ಟಿವಿ ಅಳವಡಿಕೆ ಸೇರಿದಂತೆ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿ ಶಿವಾನಂದ, ಡಯಟ್ ಉಪ ನಿರ್ದೇಶಕರಾದ ಆರ್.ಇಂದಿರಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್ ಸೇರಿದಂತೆ ಇತರರು ಇದ್ದರು.