ರಾಯಚೂರು | ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನಗಳ ಪ್ರಗತಿ ಪರಿಶೀಲನಾ ಸಭೆ
ಸರಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸಿ : ಪಲ್ಲವಿ ಜಿ.
ರಾಯಚೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರದ ಎಲ್ಲ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಾರಿಯಲ್ಲಿರುವ ವಿವಿಧ ಯೋಜನಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಲೆಮಾರಿ ಹಾಗೂ ಅರೆ ಅಲೆಮಾರಿಗಳಲ್ಲಿ 46 ಜನಾಂಗದವರಿದ್ದು, ಇವರು ಆರ್ಥಿಕ ಮತ್ತು ಅಭಿವೃದ್ಧಿ ಚಟುವಟಿಕೆ ಕೈಗೊಂಡು ಸ್ಥಿರವಾಗಿ ಒಂದು ಕಡೆ ನೆಲೆಸುವಂತೆ ಮಾಡಲು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ನಿಗಮ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಪೂರಕವಾಗಿದೆ. ಪ್ರತಿ ಜಿಲ್ಲೆಯಲ್ಲೂ ಪ್ರವಾಸ ಮಾಡಿ ಅಲೆಮಾರಿಗಳ ಸ್ಥಿತಿಗತಿ, ಸಮಸ್ಯೆಗಳನ್ನು ಪರಿಶೀಲಿಸಿ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಆದ್ಯತೆ ನೀಡಬೇಕು. ಅಲೆಮಾರಿಗಳು ಮನೆ, ಸ್ವಯಂ ಉದ್ಯೋಗ, ಒಟ್ಟಾರೆಯಾಗಿ ಜೀವನದಲ್ಲಿ ಭದ್ರತೆ ದೊರೆತು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತಿ ಹಂತದಲ್ಲಿ ಸರಕಾರ ಸವಲತ್ತುಗಳನ್ನು ಒದಗಿಸುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದ, ವಿಶೇಷ ಕರ್ತವ್ಯಾಧಿಕಾರಿ ಆನಂದ, ಜಿಲ್ಲಾ ಅನುಷ್ಠಾನ ಸಮಿತಿಯ ಪರಶುರಾಮ್ ನಕ್ಕುಂಡಿ ಸೇರಿದಂತೆ ಅಲೆಮಾರಿ ಸಮುದಾಯದ ಮುಖಂಡರು ಇದ್ದರು.