ರಾಯಚೂರು | ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಿ : ಸಿಇಒ ರಾಹುಲ್ ತುಕಾರಾಂ ಪಾಂಡ್ವೆ
ರಾಯಚೂರು : ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನ.11ರ ಸೋಮವಾರದಂದು ನಗರದ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರಾ ಶಿಕ್ಷಣಧಿಕಾರಿಗಳ ವತಿಯಿಂದ ಸರಕಾರಿ, ಅನುದಾನಿತ, ಖಾಸಗಿ ಪ್ರೌಢ ಶಾಲೆಗಳ ಮುಖ್ಯ ಗುರುಗಳಿಗೆ 2024-25ನೇ ಸಾಲಿನ ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಉತ್ತಮಪಡಿಸಲು ಆಯೋಜಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂದಿನ ವರ್ಷ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶವು ಬರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಶಾಲೆಯಲ್ಲಿ ಶೇ.100 ಫಲಿತಾಂಶ ಕಡ್ಡಾಯವಾಗಿ ಬರಬೇಕು. ಸರಕಾರದ ಪ್ರಧಾನ ಕಾರ್ಯದರ್ಶಿಯವರ ಆದೇಶದಂತೆ 20 ಅಂಶಗಳನ್ನು ಕಡ್ಡಾಯ ಪಾಲನೆ ಮಾಡಬೇಕು. 100 ವಿದ್ಯಾರ್ಥಿಗಳ ನೋಂದಣಿ ಮಾಡಿಸುವುದು. ಪರೀಕ್ಷಾ ಸುಧಾರಣೆ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಎಮ್.ಡಿ.ಎಮ್ ಹಾಜರಾತಿಯಂತೆ ದೈನಂದಿನ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಶಾಲೆಗೆ ನಿಯಮಿತವಾಗಿ ಹಾಜರಾಗದೇ ಇರುವ 10ನೇ ತರಗತಿಯ ವಿದ್ಯಾರ್ಥಿಗಳ ಪಾಲಕರ ಮನವೊಲಿಸಿ ಅಂತಹ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿವಹಿಸಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಬಗ್ಗೆ ಕ್ರಮ ಜರುಗಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ಭಂಡಾರಿ, ಡಿವೈಪಿಸಿ ಈರಣ್ಣ ಕೋಸಗಿ, ಅಕ್ಷರ ದಾಸೋಹ ಕಾರ್ಯಕ್ರಮ ಅಧಿಕಾರಿ ಪ್ರಭು ಕಣ್ಣನ್, ರಾಯಚೂರು ತಾಲೂಕು ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.