ಆರೆಸ್ಸೆಸ್ ಪಥಸಂಚಲನಕ್ಕೆ ರಾಯಚೂರು ವಿ.ವಿ. ಕುಲಪತಿ ಮುಖ್ಯ ಅತಿಥಿ
ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಭಾಗವಹಿಸಲಿ ಎಂದ ಜನರು
ಸಾಂದರ್ಭಿಕ ಚಿತ್ರ(PTI)
ರಾಯಚೂರು : ವಿಜಯದಶಮಿ ಉತ್ಸವದ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ ಸೋಮವಾರ ಸಂಜೆ ಏರ್ಪಡಿರುವ ಆರೆಸ್ಸೆಸ್ ಪಥಸಂಚಲನದಲ್ಲಿ ರಾಯಚೂರು ವಿ.ವಿ. ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ ಅವರು ಭಾಗವಹಿಸಲಿದ್ದಾರೆ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
ರಾಯಚೂರು ನಗರದಲ್ಲಿ ಇಂದು(ಅ.14) ಸಂಜೆ 5.30ಕ್ಕೆ ವಿಜಯದಶಮಿಯ ಉತ್ಸವದ ಹಿನ್ನೆಲೆಯಲ್ಲಿ ಆರೆಸ್ಸೆಸ್ ಪಥಸಂಚಲನ ಆಯೋಜಿಸಿಸಲಾಗಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರೊ.ಹರೀಶ್ ರಾಮಸ್ವಾಮಿ ಅವರು ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ. ಈ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದ್ದು, ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಸಾಂವಿಧಾನಿಕ ಹುದ್ದೆಯಲ್ಲಿರುವ, ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಯಾದ ರಾಯಚೂರು ವಿಶ್ವವಿದ್ಯಾಲಯದ ಕುಲಪತಿಗಳು, ಆರೆಸ್ಸೆಸ್ ಸಂಘಟನೆಯ ಜೊತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಖಂಡನೀಯ. ಕಾರ್ಯಕ್ರಮದಲ್ಲಿ ಭಾಗವಹಿಸುವುದಾದರೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಭಾಗವಹಿಸಲಿ ಎಂದು ಸಾಮಾಜಿಕ ಕಾರ್ಯಕರ್ತ, ವಕೀಲ ಶಿವಕುಮಾರ ಮ್ಯಾಗಳಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಹರೀಶ್ ರಾಮಸ್ವಾಮಿ ಒಬ್ಬ ವ್ಯಕ್ತಿಯಾಗಿ ಯಾವ ಸಂಘಟನೆ ಜೊತೆಗೆ ಬೇಕಾದರೂ ಗುರುತಿಸಿಕೊಳ್ಳುವ ಸ್ವಾತಂತ್ರ್ಯ, ಆಯ್ಕೆ ಹೊಂದಿದ್ದಾರೆ. ಆದರೆ ಒಂದು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಅವರ ನಡೆ ಬೌದ್ಧಿಕ ವಲಯದಲ್ಲಿ ಅತ್ಯಂತ ಅಪಾಯಕಾರಿ ಸಂದೇಶವನ್ನು ಪಸರಿಸಿದೆ” ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.