ಚನ್ನಪಟ್ಟಣ | ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು
ಚನ್ನಪಟ್ಟಣ: ಮಹಿಳೆಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮಹಿಳೆಯೊಬ್ಬರಿಗೆ ಟಿ.ಎಸ್. ರಾಜು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ.
ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಚೌತಿ ಹಬ್ಬದ ಹಿನ್ನೆಲೆಯಲ್ಲಿ ತವರು ಮನೆಗೆ ಆಗಮಿಸಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆ ರಾತ್ರಿ 11:40ರ ಸುಮಾರಿಗೆ ಮನೆ ಮುಂದೆ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ಟಿ.ಎಸ್. ರಾಜು ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಮೊಬೈಲ್ ಫೋನ್ ನಲ್ಲಿ ತನ್ನ ಫೋಟೋ ತೆಗೆದು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಹಿಂದೆಯೂ ಈತ ಅಸಭ್ಯವಾಗಿ ವರ್ತಿಸಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ ಟಿ.ಎಸ್. ರಾಜು ವಿರುದ್ಧ ಪ್ರಕರಣ ದಾಖಲಾಗಿದೆ.
ಪಕ್ಷದಿಂದ ಅಮಾನತು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜುರನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎನ್. ಆನಂದಸ್ವಾಮಿ ಸೋಮವಾರ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.