ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್‌ರಿಂದ ಭರ್ಜರಿ ಪ್ರಚಾರ
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ಸುಡು ಬಿಸಿಲನ್ನು ಲೆಕ್ಕಿಸದೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ಸಂತೆಕಡೂರು ಗ್ರಾಮದಿಂದ ಮತ ಪ್ರಚಾರ ಆರಂಭಿಸಿದ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ನೀಡಿದರು.
ಸಂತೆ ಕಡೂರು ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, "ನಾನು ಶಿವಮೊಗ್ಗದ ಮಗಳು. ನನ್ನನ್ನ ಬರಿಗೈಯಲ್ಲಿ ಕಳಿಸಬಾರದು. ಮಲೆನಾಡಿನ ಜನರ ಧ್ವನಿಯಾಗಿ ಕೆಲಸ ಮಾಡುತ್ತೇನೆ" ಎಂದು ಮತಯಾಚಿಸಿದರು.
ಸಹಸ್ರಾರು ಸಂಖ್ಯೆಯಲ್ಲಿ ಸೇರಿರುವ ಮಹಿಳೆಯರನ್ನು ನೋಡಿ ತುಂಬಾ ಸಂತೋಷವಾಗಿದೆ. ಸಮಾಜ ಸೇವೆ ಮಾಡಬೇಕು ಅನ್ನೋದು ನನ್ನ ಬಯಕೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದುಕೊಂಡಿದೆ. ಬಡವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಸಚಿವ ಮಧುಬಂಗಾರಪ್ಪ ಮಾತನಾಡಿ, "ಗೀತಾ ಶಿವರಾಜ್ ಕುಮಾರ್ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಗೀತಾ ಅವರನ್ನು ಗೆಲ್ಲಿಸುವ ಮೂಲಕ ಆಶೀರ್ವಾದ ಮಾಡಬೇಕು" ಎಂದು ಮನವಿ ಮಾಡಿದರು.
ಬಂಗಾರಪ್ಪ ರಾಜ್ಯ, ರಾಷ್ಟ್ರ ರಾಜಕಾರಣಿ ಆಗಿದ್ದವರು.ಬಂಗಾರಪ್ಪ ಜಾರಿಗೆ ತಂದ ಯೋಜನೆಗಳು ಇಂದಿಗೂ ಪ್ರಸ್ತುತವಾಗಿ.ಬಂಗಾರಪ್ಪ ಸೋಲಿಗೆ ನ್ಯಾಯ ದೊರಕಿಸಿಕೊಡಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್, ಪ್ರಮುಖರಾದ ಜಿ.ಡಿ ಮಂಜುನಾಥ್, ವೇದಾ ವಿಜಯಕುಮಾರ್, ವಿಜಯ ಕುಮಾರ್ ಸೇರಿದಂತೆ ಹಲವರಿದ್ದರು.