ಬರ ನಿರ್ವಹಣೆಗೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಹಾಗೂ ಜಾನುವಾರುಗಳಿಗೆ ಉಂಟಾಗಬಹುದಾದ ಸಂಭಾವ್ಯ ಮೇವಿನ ಕೊರತೆಯನ್ನು ನೀಗಿಸಲು ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.
ಶಿಕಾರಿಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು, ಬರಗಾಲ ಮತ್ತು ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಡಿದ ಅವರು, ತುರ್ತು ಸಂದರ್ಭಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಹಾಗೂ ಜನಸಾಮಾನ್ಯರಿಗೆ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಕಾಯ್ದಿರಿಸಲಾಗಿದೆ ಎಂದರು.
ತಾಲೂಕಿನ ಅಂಜನಾಪುರ ಹಾಗೂ ಅಂಬ್ಲಿಗೊಳ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದ ಕುಡಿಯುವ ನೀರಿನ ಲಭ್ಯತೆಯಿದ್ದು, ಸದ್ಯ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. 14ನೇ ಹಣಕಾಸು ಯೋಜನೆಯಡಿಯಲ್ಲಿಯೂ ಅಗತ್ಯತೆಗಳಿಗೆ ಅನುದಾನ ಬಳಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.
ತಾಲೂಕಿನ ಸುಮಾರು 11,000ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತದಲ್ಲಿ 4,000ಹೆಕ್ಟೇರ್ ಭತ್ತದ ಬೆಳೆ ಹಾನಿಗೊಳಗಾಗಿದ್ದು, ರೂ. 40.00ಕೋಟಿ ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ. 19,000ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಮೆಕ್ಕೆಜೋಳದಲ್ಲಿ 14,000ಹೆಕ್ಟೇರ್ ಮೆಕ್ಕೆಜೋಳ ಹಾನಿಗೊಳಗಾಗಿದ್ದು, ಸಮಾರು 101ಕೋ. ರೂ. ನಷ್ಟವಾಗಿರುವ ಬಗ್ಗೆ ಅಂದಾಜು ಮಾಡಲಾಗಿದೆ. ಈಗಾಗಲೇ 4,00ಕೋ.ರೂ.ಗಳ ಮಧ್ಯಂತರ ವಿಮೆ ವಿತರಿಸಲಾಗಿದೆ. ರೈತರಿಗೆ ಪ್ರಸಕ್ತ ಬೇಸಿಗೆಯಲ್ಲಿ ಭತ್ತ ಮತ್ತು ನೀರಾವರಿ ಹೊರತುಪಡಿಸಿ, ಸೇಂಗಾ, ಹೆಸರು, ಹುರಳಿ ಮುಂತಾದ ಪರ್ಯಾಯ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಮನವಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.
ತಾಲೂಕಿನಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಯಾವುದೇ ಮೇವಿನ ಕೊರತೆ ಕಂಡುಬರುವುದಿಲ್ಲ. ಅಲ್ಲದೇ ಸಾಕಷ್ಟು ಪ್ರಮಾಣದ ಮೇವು ದಾಸ್ತಾನಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ಅಗತ್ಯಕ್ಕೆ ತಕ್ಕಂತೆ ರೈತರಿಗೆ ಮೇವಿನ ಬೀಜಗಳನ್ನು ವಿತರಿಸಲಾಗಿದೆ ಎಂದರು.