ಶಿವಮೊಗ್ಗ : ನಾಮಪತ್ರ ಸಲ್ಲಿಸಿದ ಗೀತಾ ಶಿವರಾಜಕುಮಾರ್
ಶಿವಮೊಗ್ಗ, ಎ.15: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪರ ಪುತ್ರಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆಯವರಿಗೆ ಗೀತಾ ಶಿವರಾಜಕುಮಾರ್ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರ ಪತಿ ನಟ ಶಿವರಾಜ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಇತರರಿದ್ದರು.
ಗೀತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ನಾಮಪತ್ರ ಸಲ್ಲಿಕೆ ನಂತರ ಇಲ್ಲಿನ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭಗೊಂಡ ಮೆರವಣಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು.
ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪ್ಲೇಕಾರ್ಡ್ ರಾರಾಜಿಸಿದವು. ಮೆರವಣಿಗೆಯ ದಾರಿಯುದ್ದಕ್ಕೂ ಸಚಿವ ಮಧುಬಂಗಾರಪ್ಪ ಹಾಗೂ ಶಿವರಾಜಕುಮಾರ್ ಅವರು ಮತಯಾಚಿಸಿದರು.
ಮೆರವಣಿಗೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದವರಿಗೆ ಮಜ್ಜಿಗೆ, ನೀರಿನ ಪ್ಯಾಕೆಟ್ ಹಂಚಲಾಯಿತು.
ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯ್ಕ್, ಬಿ.ಕೆ.ಸಂಗಮೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಕೆ.ಸುಕುಮಾರ್ ಶೆಟ್ಟಿ, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಎಚ್.ಸಿ.ಯೋಗೀಶ್, ಎನ್.ರಮೇಶ್, ಶ್ರೀನಿವಾಸ ಕರಿಯಣ್ಣ ಇದ್ದರು.