ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಸಿದ್ದರಾಮಯ್ಯರಿಗೆ ʼಜಾತಿ ಜನಗಣತಿʼ ನೆನಪಾಗುತ್ತದೆ : ಆರ್.ಅಶೋಕ್
ಸಿದ್ದರಾಮಯ್ಯ/ಅಶೋಕ್
ಬೆಂಗಳೂರು : ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ʼಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನು ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆʼ ಎಂದು ಹೇಳಿದ್ದಾರೆ.
ʼಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆʼ ಎಂದಿದ್ದಾರೆ.
ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ನವರ 'ಆತ್ಮಸಾಕ್ಷಿ'ಗೆ ಕೆಲವು ಪ್ರಶ್ನೆಗಳನ್ನು ಇಲ್ಲಿ ಆರ್.ಅಶೋಕ್ ಕೇಳಿದ್ದಾರೆ.
1.) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?
2.) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?
3.) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 20 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನು ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ?
5.) ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?
6.) ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಅಬಕಾರಿ ಇಲಾಖೆ ಹಗರಣ, ಕಂಟ್ರಾಕ್ಟರ್ ಗಳ ಕಮಿಷನ್ ಆರೋಪ, ಪ್ರಮನಿಯಲ್ ಅಧಿಕಾರಿಗಳು, ಗುತ್ತಿಗೆದಾರರ ಸರಣಿ ಆತ್ಮಹತ್ಯೆ ಈ ರೀತಿ ಸಾಲು ಸಾಲು ವಿವಾದಗಳು, ಕಳಂಕಗಳ ಸುಳಿಯಲ್ಲಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?
7.) ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬಳಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತರಲಾಗುತ್ತಿದೆಯೇ?
8.) ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?
9.) ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ?
ನಾಳೆ, ಜನವರಿ 16ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಗಳ 'ಆತ್ಮಸಾಕ್ಷಿ' ಈ ಪ್ರಶೆಗಳನ್ನು ಆತ್ಮಾವಲೋಕನ ಮಾಡಿಕೊಂಡು ಕರ್ನಾಟಕದ ಜನತೆಗೆ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.