ಮನು ಭಾಕರ್, ಗುಕೇಶ್ ಸಹಿತ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ

Photo:X/@rashtrapatibhvn
ಹೊಸದಿಲ್ಲಿ: ಒಲಿಂಪಿಕ್ ನಲ್ಲಿ ಎರಡು ಪದಕ ಗಳಿಸಿದ ಮನು ಭಾಕರ್ ಹಾಗೂ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು.
ಇಂದು ಇಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮನು ಭಾಕರ್ ಹಾಗೂ ಗುಕೇಶ್ ಅಲ್ಲದೆ, ಪುರುಷರ ಹಾಕಿ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಹಾಗೂ ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಈ ವಾರ್ಷಿಕ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಟೋಕಿಯೊ ಹಾಗೂ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕಗಳನ್ನು ಗೆದ್ದ ರಾಷ್ಟ್ರೀಯ ತಂಡದಲ್ಲಿ ಹರ್ಮನ್ ಪ್ರೀತ್ ಸಿಂಗ್ ಕೂಡಾ ಇದ್ದರು. ಜಪಾನ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ್ದ ಪ್ರವೀಣ್ ಕುಮಾರ್, ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಅವರು ಎಡಗಾಲಿನ ಅಂಗವೈಕಲ್ಯ ಹೊಂದಿದ್ದಾರೆ.
ಈ ವಾರ್ಷಿಕ ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಒಟ್ಟು 32 ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಈ ಪೈಕಿ 17 ಮಂದಿ ಪ್ಯಾರಾ ಅಥ್ಲೀಟ್ ಗಳೇ ಆಗಿರುವುದು ಈ ಬಾರಿಯ ವಿಶೇಷವಾಗಿದೆ.