ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ | ಪಂತ್ ಅರ್ಧಶತಕ, ಬಾಂಗ್ಲಾ ವಿರುದ್ಧ ಭಾರತಕ್ಕೆ ಜಯ
PC :@ICC
ನ್ಯೂಯಾರ್ಕ್ : ವಿಕೆಟ್ಕೀಪರ್-ಬ್ಯಾಟರ್ ರಿಷಭ್ ಪಂತ್ ಅರ್ಧಶತಕ(53 ರನ್, 32 ಎಸೆತ) ಹಾಗೂ ಹಾರ್ದಿಕ್ ಪಾಂಡ್ಯ(ಔಟಾಗದೆ 40, 23 ಎಸೆತ)ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡ ಶನಿವಾರ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 60 ರನ್ ಅಂತರದಿಂದ ಮಣಿಸಿದೆ.
ನಾಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಟಾಸ್ ಜಯಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ಗಳ ನಷ್ಟಕ್ಕೆ 182 ರನ್ ಗಳಿಸಿತು.
ಗೆಲ್ಲಲು 183 ರನ್ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳ ನಷ್ಟಕ್ಕೆ ಕೇವಲ 122 ರನ್ ಗಳಿಸಲಷ್ಟೇ ಶಕ್ತವಾಯಿತು. ವೇಗದ ಬೌಲರ್ ಅರ್ಷದೀಪ್ ಸಿಂಗ್(2-12) ಹಾಗೂ ಆಲ್ರೌಂಡರ್ ಶಿವಂ ದುಬೆ(2-13) ತಲಾ ಎರಡು ವಿಕೆಟ್ಗಳನ್ನು ಪಡೆದರು. ಭಾರತದ 8 ಬೌಲರ್ಗಳು ಬೌಲಿಂಗ್ ಅವಕಾಶ ಪಡೆದರು.
ಬಾಂಗ್ಲಾದೇಶದ ಬ್ಯಾಟಿಂಗ್ನಲ್ಲಿ ಮಹಮದುಲ್ಲಾ (40 ರನ್, 28 ಎಸೆತ)ಸರ್ವಾಧಿಕ ಸ್ಕೋರ್ ಗಳಿಸಿದರು.
ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಪಂತ್ ಗರಿಷ್ಠ ಸ್ಕೋರರ್ ಎನಿಸಿಕೊಂಡರೆ, ಹಾರ್ದಿಕ್ ಪಾಂಡ್ಯ(40 ರನ್), ಸೂರ್ಯಕುಮಾರ್ ಯಾದವ್(31 ರನ್) ಹಾಗೂ ರೋಹಿತ್ ಶರ್ಮಾ(23 ರನ್) ಸ್ಕೋರ್ ಗಳಿಸಿದ್ದಾರೆ.