ರಸ್ತೆಗೆ ಬಿದ್ದ ಮರ; ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ
► ಸ್ಥಳಕ್ಕೆ ಅಧಿಕಾರಿಗಳು, ಅರಣ್ಯ ಸಿಬ್ಬಂದಿ ಭೇಟಿ
ಮಡಿಕೇರಿ, ಜು.24: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ.
ಸೋಮವಾರ ಮದೆನಾಡು ಸಮೀಪ ಕರ್ತೋಜೆಯಲ್ಲಿ ಮರ ಸಹಿತ ಭೂ ಕುಸಿತ ಹಿನ್ನೆಲೆ ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ.
ಮಡಿಕೇರಿಯಿಂದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಸ್ತೆ ಬದಿಯ ಮಣ್ಣು-ಮರ ತೆರವುಗೊಳಿಸುತ್ತಿದ್ದಾರೆ. ಜೆಸಿಬಿ-ಹಿಟಾಚಿ ಯಂತ್ರ ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕೊಯನಾಡು ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮಣ್ಣು-ಮರ ತೆರವು; ಸಂಚಾರಕ್ಕೆ ಅವಕಾಶ
ಈ ಸಂಬಂಧ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶಿಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬ್ಬಂದಿ, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರ ಕಲ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.