ಆದಾಯ ಮೀರಿ ಹೆಚ್ಚಿನ ಆಸ್ತಿ ಗಳಿಕೆ ಆರೋಪ: ಭೂಮಾಪನ ಇಲಾಖೆಯ ಅಧೀಕ್ಷಕ 5 ದಿನ ಪೊಲೀಸ್ ವಶಕ್ಕೆ
ಬೆಂಗಳೂರು, ಆ.24: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕೆ.ಆರ್.ಪುರ ತಾಲ್ಲೂಕಿನ ಭೂಮಾಪನ ಇಲಾಖೆಯ ಅಧೀಕ್ಷಕ ಕೆ.ಟಿ.ಶ್ರೀನಿವಾಸಮೂರ್ತಿರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ.
ಅಕ್ರಮ ಆಸ್ತಿ ಬಗ್ಗೆ ಸಮರ್ಪಕವಾದ ಮಾಹಿತಿ ನೀಡಿದ ಕಾರಣ ಲೋಕಾಯುಕ್ತ ಪೊಲೀಸರು ಶ್ರೀನಿವಾಸಮೂರ್ತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆ ನಡೆಸಲು ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಆರೋಪಿಯನ್ನು ಐದು ದಿನಗಳ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಲೋಕಾಯುಕ್ತ ಪೊಲೀಸರು ಆ.22ರಂದು ಕೆ.ಟಿ.ಶ್ರೀನಿವಾಸ್‍ಮೂರ್ತಿಗೆ ಸೇರಿದ್ದ 14 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದರು. ಈ ವೇಳೆ ತಪಾಸಣೆ ನಡೆಸಿದಾಗ ಹಲವು ಮಾಹಿತಿಗಳು ಲೋಕಾಯುಕ್ತರಿಗೆ ಸಿಕ್ಕಿದ್ದರ ಹಿನ್ನೆಲೆ, ಅವರನ್ನು ಬಂಧಿಸಲಾಗಿತ್ತು. ಮಹತ್ವದ ದಾಖಲೆಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಲು ಲೋಕಾಯುಕ್ತ ಪೊಲೀಸರು, ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ನ್ಯಾಯಾಲಯ ಸಮ್ಮತಿ ನೀಡಿದೆ.