ಕೋ-ಆಪರೇಟೀವ್ ಮ್ಯಾನೇಜ್ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಬಗ್ಗೆ ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ
ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ: ಕೋ-ಆಪರೇಟೀವ್ ಮ್ಯಾನೇಜ್ಮೆಂಟ್ನ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ರವಿವಾರ ನಗರದ ಹುಬ್ಬಳ್ಳಿ ಬೈಪಾಸ್ ರಸ್ತೆಯ ತೋಟಗಾರಿಕಾ ವಿ.ವಿ.ಪಕ್ಕದಲ್ಲಿರುವ ಮೈದಾನದಲ್ಲಿ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೆ ‘ಅಖಿಲ ಭಾರತ ಸಹಕಾರ ಸಪ್ತಾಹ’ ಕಾರ್ಯಕ್ರಮದಲ್ಲಿ 2024ನೆ ಸಾಲಿನ ‘ಸಹಕಾರ ರತ್ನ ಪ್ರಶಸ್ತಿ’ ವಿತರಿಸಿ ಅವರು ಮಾತನಾಡಿದರು.
ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋ-ಆಪರೇಟೀವ್ ಮ್ಯಾನೇಜ್ಮೆಂಟ್ ಪದವಿ, ಡಿಪ್ಲೋಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಸಹಕಾರಿ ಚಳವಳಿ 1904ರ ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾಗಿತ್ತು. 1905ರಲ್ಲಿ ಸಹಕಾರಿ ನಿಯಮಗಳು ಜಾರಿಗೆ ಬಂದವು. ಸ್ವಾತಂತ್ರ್ಯಾ ನಂತರ ನೆಹರೂ ಅವರು ದೇಶದ ಪ್ರಧಾನಿಯಾಗಿ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಮತ್ತು ಪೆÇ್ರೀತ್ಸಾಹ ಕೊಟ್ಟಿದ್ದರಿಂದ ಸಹಕಾರಿ ಚಳವಳಿ ದೇಶವ್ಯಾಪಿ ವ್ಯಾಪಿಸಲು ಸಹಕಾರಿಯಾಯಿತು ಎಂದು ಸಿದ್ದರಾಮಯ್ಯ ತಿಳಿಸಿದರು.
ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ/ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ. ಹಾಲಿಗೆ 31 ರೂ. ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗುತ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಹಾಲು ಉತ್ಪಾದಕರಿಗೆ ಅನುಕೂಲ ಆಗುವ ಉದ್ದೇಶದಿಂದಲೇ ನಮ್ಮ ಸರಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ. ಪ್ರೋತ್ಸಾಹ ದನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆ ಈಡೇರಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಬಾಕ್ಸ್..
ಶೇ.58ರಷ್ಟು ನಬಾರ್ಡ್ ನೆರವು ಕಡಿತ: ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದಲ್ಲಿ ಸಹಕಾರ ಇಲಾಖೆ ಆರಂಭಿಸಿದರು. ಇದಕ್ಕೆ ಅಮಿತ್ ಶಾ ಅವರೇ ಸಚಿವರು. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ ಶೇ.58ರಷ್ಟು ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ. ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ದಾರ ಮಾಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.