ನಮ್ಮ ಎಲ್ಲಾ ʼಗ್ಯಾರಂಟಿʼ ಯೋಜನೆಗಳು ಶೆ.95ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿದೆ: ಡಿ.ಕೆ ಶಿವಕುಮಾರ್
ಬೆಂಗಳೂರು: ನಮ್ಮ ಎಲ್ಲಾ ಗ್ಯಾರಂಟಿ ಯೋಜನೆಗಳು ಶೇ.95ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿವೆ. ಶೇ 5-6ರಷ್ಟು ಜನರಿಗೆ ಮಾತ್ರ ತಾಂತ್ರಿಕ ಸಮಸ್ಯೆಗಳಿಂದ ಹಣ ತಲುಪಿಲ್ಲ. ಅವರ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರು ವಿವಿಯ ಜ್ಞಾನಭಾರತಿ ಬಿಪೆಡ್ ಮೈದಾನದಲ್ಲಿ ರವಿವಾರ ನಡೆದ "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಸದ್ಯದಲ್ಲೇ ಪಾಲಿಕೆ ಬಜೆಟ್ ಮಂಡನೆಯಾಗಲಿದೆ" ಎಂದು ತಿಳಿಸಿದರು.
"ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ನಮ್ಮದೇ ಆದ ಯೋಜನೆಗಳಿವೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಮೆಟ್ರೋ ಹೋಗುವ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದರು.
ಯಶವಂತಪುರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ಮಾಡಲು ಫೀಸಿಬಲ್ ವರದಿ ಸಿದ್ಧಪಡಿಸಲಾಗುತ್ತಿದೆ. ಸುಮ್ಮನಹಳ್ಳಿ, ಗೊರಗೊಂಟೆ ಪಾಳ್ಯ ಸೇರಿದಂತೆ ಇತರ ಕಡೆಗಳಲ್ಲಿ ಈ ಯೋಜನೆ ಮಾಡಲು ಸಿದ್ಧತೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಇದುವರೆಗೂ 12 ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಮಾಡಿದ್ದು, 20 ಸಾವಿರ ಅಹವಾಲುಗಳನ್ನು ದಾಖಲಾಗಿವೆ. ಮುಖ್ಯಮಂತ್ರಿಗಳು ಕೂಡ ಎರಡು ಬಾರಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅವರ ಕಾರ್ಯಕ್ರಮದಲ್ಲೂ ಸಾವಿರಾರು ಮಂದಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಅರ್ಜಿಗಳ ವಿಲೇವಾರಿಗೆ ಪ್ರತ್ಯೇಕವಾಗಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶಕ್ತಿ ಯೋಜನೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಕೇಂದ್ರ ಸರಕಾರರ ಅಕ್ಕಿ ನೀಡದಿದ್ದರೂ ಅದಕ್ಕೆ ಹಣ ನೀಡುತ್ತಿದ್ದೇವೆ. ಗೃಹಜ್ಯೋತಿ ಯೋಜನೆಯಲ್ಲಿ ಉಚಿತ ವಿದ್ಯುತ್ ಸಿಗುತ್ತಿದೆ. ಯುವನಿಧಿ ಯೋಜನೆಯಲ್ಲಿ ನಿರುದ್ಯೋಗ ಭತ್ಯೆ ಸಿಗುತ್ತಿದೆ. ಹಿಂದೆ ಇದ್ದ ಯಾವುದಾದರೂ ಸರಕಾರ ಇಂತಹ ಕಾರ್ಯಕ್ರಮ ನೀಡಿದೆಯೇ? ನೀವು ಆರಿಸಿದ ಸರಕಾರ ನುಡಿದಂತೆ ನಡೆಯುತ್ತಿದೆ ಎಂದರು.
ನಾವು ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ. ಜನರ ಬದುಕು ಕಟ್ಟಿಕೊಡುವ ಬಗ್ಗೆ ರಾಜಕಾರಣ ಮಾಡುತ್ತೇವೆ. ಬೆಲೆ ಏರಿಕೆ ಸಮಸ್ಯೆಗೆ ಸಿಲುಕಿರುವ ನಿಮಗೆ ಪರಿಹಾರ ನೀಡಲು ನಮ್ಮ ಸರಕಾರ ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸರಕಾರದ ಯಾವುದೇ ಯೋಜನೆ ನಿಮಗೆ ಸಿಗದಿದ್ದರೆ ಅವುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಜತೆಗೆ ನಿಮ್ಮ ಖಾತಾ ಸಮಸ್ಯೆ, ಪಿಂಚಣಿ ಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಆಸ್ತಿಗಳನ್ನು ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೆ ಉಚಿತವಾಗಿ ದಾಖಲೆಗಳನ್ನು ತಲುಪಿಸುವ "ನಮ್ಮ ಸ್ವತ್ತು" ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.