ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ಆರೋಪ: ಸಿಸಿಬಿ ಪೊಲೀಸರಿಂದ ಐವರ ಬಂಧನ
ಬೆಂಗಳೂರು: ನಗರದಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿರುವುದು ವರದಿಯಾಗಿದೆ.
ಬಂಧಿತರನ್ನು ಸಯ್ಯದ್ ಸುಹೈಲ್, ಉಮರ್, ಮುದಾಸಿರ್, ಝಾಹಿದ್, ಫೈಝಲ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸ್ಫೋಟಕ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, 'ಬಂಧಿತ ಆರೋಪಿಗಳು ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಟಿ.ನಸೀರ್ ಹಾಗೂ ಜುನೈದ್ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಸದ್ಯ ಟಿ.ನಸೀರ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. ಜುನೈದ್ ತಲೆ ಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿಸಲಾಗಿದೆ' ಎಂದು ತಿಳಿಸಿದ್ದಾರೆ.
''2017ರಲ್ಲಿ ಆರ್.ಟಿ ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಂಧಿತ ಐವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರರ ಸಂಪರ್ಕ ಬೆಳೆಸಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಇದೀಗ ಐವರು ಆರೋಪಿಗಳನ್ನು 15 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ'' ಎಂದು ಮಾಹಿತಿ ನೀಡಿದ್ದಾರೆ.