ಆನೇಕಲ್ | ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ: ಇಬ್ಬರು ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ
ಆನೇಕಲ್, ಜ.19: ನಿರ್ಮಾಣ ಹಂತದ ಶಾಲಾ ಕಟ್ಟಡವೊಂದು ಕುಸಿದ ಪರಿಣಾಮ ಇಬ್ಬರು ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿ ಎಂಬಲ್ಲಿ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ.
ಬ್ಯಾಡರಹಳ್ಳಿಯಲ್ಲಿ ಖಾಸಗಿ ಶಾಲೆಯೊಂದು ನಿರ್ಮಾಣವಾಗುತ್ತಿದೆ. ಇದರ ಎರಡನೇ ಅಂತಸ್ತಿನ ನಿರ್ಮಾಣ ನಡೆಯುತ್ತಿದೆ. ಇಂದು ಬೆಳಗ್ಗೆಯೇ ಕಾರ್ಮಿಕರು ಕೆಲಸ ಆರಂಭಿಸಿದ್ದರು. ಈ ವೇಳೆ ಕಟ್ಟಡದ ಸೆಂಟ್ರಿಂಗ್ ಏಕಾಏಕಿ ಕುಸಿದಿದೆ. ಅದರ ಮೇಲೆ 25ರಷ್ಟು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದವರು ಕೆಳಗುರುಳಿದ್ದಾರೆ. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಸಾಹಿದ್(31) ಮತ್ತು ಮಿನಾರ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಇವರು ಪಶ್ಚಿಮ ಬಂಗಾಳ ಮೂಲದವರೆಂದು ಹೇಳಲಾಗಿದೆ. ಗಾಯಾಳುಗಳನ್ನು ಆನೇಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.