‘ಸಚಿವರ ಭರವಸೆ’ ಧರಣಿ ಮುಂದೂಡಿದ ಅಂಗನವಾಡಿ ಕಾರ್ಯಕರ್ತೆಯರು

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಭರವಸೆ ಹಿನ್ನೆಲೆಯಲ್ಲಿ ಐದು ದಿನಗಳಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ಅಧ್ಯಕ್ಷೆ ಬಿ.ಪ್ರೇಮಾ ತಿಳಿಸಿದ್ದಾರೆ.
ರವಿವಾರ ಈ ಕುರಿತು ವಾರ್ತಾಭಾರತಿ ಪತ್ರಿಕೆಗೆ ಮಾಹಿತಿ ನೀಡಿದ ಪ್ರೇಮಾ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ. ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ನೀಡಲಾಗುವುದು’ ಎಂದು ದೂರವಾಣಿ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದು, ಬಜೆಟ್ ಮಂಡನೆ ಆಗುವವರೆಗೂ ಕಾಯುತ್ತೇವೆ. ಒಂದು ವೇಳೆ ಭರವಸೆ ಈಡೇರದಿದ್ದರೆ ಮತ್ತೆ ಧರಣಿ ಆರಂಭಿಸುತ್ತೇವೆ ಎಂದು ಎಚ್ಚರಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ 12 ಸಾವಿರ ರೂ.ಕನಿಷ್ಠ ವೇತನ ನಿಗದಿ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಸತತ ಐದು ದಿನಗಳಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆಯೇ ಹೊರತು ಹಿಂಪಡೆದಿಲ್ಲ ಎಂದು ತಿಳಿಸಿದರು.