ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವದ ಸರಪಳಿ ಗಟ್ಟಿಗೊಳಿಸಿ: ಕುಮಾರಸ್ವಾಮಿ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (X/@hd_kumaraswamy)
ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಮಾಜಿ ಮುಖ್ಯಮಂತ್ರಿ, ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. 'ನಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ' ಎಂದು ಅವರು ವ್ಯಂಗ್ಯವಾಡಿದ್ದಾರೆ.
ವಿಚ್ಚಿದ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದವರು ಒತ್ತಾಯಿಸಿದ್ದಾರೆ.