ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ; 2028ಕ್ಕೆ ನಾನು ಬೇಡಿಕೆ ಇಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು, ನ. 6: ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದರೆ, ನಾನು 2028ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ನೋಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಎಂದಿದ್ದಾರೆ. ಹಾಗಾಗಿ, ಬೇರೆಯವರು ಹೇಳುವ ಅಗತ್ಯವಿಲ್ಲ ಎಂದರು.
ಇನ್ನೂ, ಲೋಕೋಪಯೋಗಿ ಇಲಾಖೆಯಲ್ಲಿ ಹೊಸ ರಸ್ತೆ ಕಾಮಗಾರಿಗಳನ್ನು ತೆಗೆದುಕೊಳ್ಳಲು 4 ಸಾವಿರ ಕೋಟಿ ರೂ.ವರೆಗೆ ಪ್ರಸ್ತಾವನೆ ಕಳುಹಿಸುತ್ತಿದ್ದೇವೆ. ಅದು ಬಂದರೆ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ನಾವು ಬಾಕಿ ಯಾವುದನ್ನೂ ಇಟ್ಟಿಲ್ಲ. ಎಲ್ಲವೂ ಬಿಜೆಪಿ ಸರಕಾರದ ಅವಧಿಯಲ್ಲಿ ಇಟ್ಟಿದ್ದು 4 ಸಾವಿರ ಕೋಟಿ ರೂ. ಹೆಚ್ಚುವರಿ ಬಾಕಿ ಇದೆ. 2 ಸಾವಿರ ಕೋಟಿ ರೂ. ಸೇರಿ 6 ಸಾವಿರ ಕೋಟಿ ರೂ. ಇದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮುಯ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ ಗೌರವ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಭಾಷಣ ಮಾಡುತ್ತಾರೆ. ಅಲ್ಲದೆ, ನಮ್ಮಲ್ಲಿ ವಾಕ್ ಸ್ವಾತಂತ್ರ್ಯವಿದೆ. ಆದರೆ, ಅವರ ಪಕ್ಷದಲ್ಲಿ ಅಂತಹ ಸ್ವಾತಂತ್ರ್ಯವಿಲ್ಲ ಎಂದು ತಿರುಗೇಟು ನೀಡಿದರು.
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೊರೆಯಾಗುವ ಶಕ್ತಿ ಇದೆ. ಬರುವ ದಿನಗಳಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ. ರಾಜ್ಯ ರಾಜಕೀಯದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬ ಸಂದೇಶ ಕಳುಹಿಸೋಣ ಎಂಬ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ, ‘ಸ್ವಾಮೀಜಿ ಸಮುದಾಯದ ಪರವಾಗಿ ಹೇಳಿದ್ದಾರೆ. ಈಗ ಸಿಎಂ ಸ್ಥಾನ ಖಾಲಿ ಇಲ್ಲವಲ್ಲ?’ ಎಂದು ನುಡಿದರು.