ಇಸ್ರೇಲ್ ದಾಳಿ ಖಂಡಿಸಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಬೆಂಗಳೂರು ಪೊಲೀಸರು; ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ
ಬೆಂಗಳೂರು: ‘ನ್ಯಾಯ ಮತ್ತು ಶಾಂತಿಗಾಗಿ ಬೆಂಗಳೂರು’ ಸಂಘಟನೆಯ ವತಿಯಿಂದ ಅಕ್ಟೋಬರ್ 28, 2023ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಫೆಲೆಸ್ತೀನ್ ಪರ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿರುವುದು ಹಾಗೂ ಅದರ ವಿರುದ್ಧ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ಪ್ರತಿಭಟಿಸಿದ ಸಂಘಟಕರ ವಿರುದ್ಧ ಪೊಲೀಸರು ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಂಡಿರುವುದರ ವಿರುದ್ಧ ‘ನ್ಯಾಯ ಮತ್ತು ಶಾಂತಿಗಾಗಿ ಬೆಂಗಳೂರು’ ಸಂಘಟನೆಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.
ಫೆಲೆಸ್ತೀನ್ ನಲ್ಲಿ ನಡೆಯುತ್ತಿರುವ ನರಮೇಧವನ್ನು ಖಂಡಿಸಿ, ಫೆಲೆಸ್ತೀನ್ ನಾಗರಿಕರಿಗೆ ನ್ಯಾಯ ದೊರೆಯಬೇಕೆಂದು ಆಗ್ರಹಿಸಿ ಹಾಗೂ ಇಸ್ರೇಲ್-ಫೆಲೆಸ್ತೀನ್ ನಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿ ರಾಜ್ಯದ ಹಲವೆಡೆ ನಡೆಯುತ್ತಿರುವ ಪ್ರತಿಭಟನೆಗಳನ್ನು ರಾಜ್ಯ ಸರ್ಕಾರ ಹತ್ತಿಕ್ಕುತ್ತಿದೆ. ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿರುವುದಲ್ಲದೆ, ಪ್ರತಿಭಟನಾಕಾರರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಅಕ್ಟೋಬರ್ 26, 2023ರಂದು ನಮ್ಮ ಪ್ರತಿಭಟನೆಗೆ ಅನುಮತಿ ನಿರಾಕರಿಸಿರುವ ಬೆಂಗಳೂರು ಪಶ್ಚಿಮ ವಲಯದ ಉಪ ಪೊಲೀಸ್ ಆಯುಕ್ತರು, ಸಂಘಟಕರು ಅಂತಾರಾಷ್ಟ್ರೀಯ ವಿಷಯದ ಕುರಿತು ಪ್ರತಿಭಟನೆ ನಡೆಸಲು ಉದ್ದೇಶಿಸಿರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನಮ್ಮ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ. ಆ ಮೂಲಕ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಿದ್ದಾರೆ. ಇದಲ್ಲದೆ, ಫೆಲೆಸ್ತೀನ್ ಪರ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಇದು ನಾಗರಿಕರ ಮೂಲಭೂತ ಹಕ್ಕುಗಳ ಮೇಲಿನ ದಾಳಿ ಮಾತ್ರವಲ್ಲದೆ, ಇಸ್ರೇಲ್ ಸರ್ಕಾರ ನಡೆಸುತ್ತಿರುವ ಕ್ರೂರ ನರಮೇಧದ ಬಗೆಗಿನ ಉದಾಸೀನತೆಯೂ ಆಗಿದೆ. ಅಲ್ಲದೆ ಪೊಲೀಸ್ ಅಧಿಕಾರದ ದುರುಪಯೋಗ ಕೂಡಾ ಎಂದು ಪತ್ರದಲ್ಲಿ ಖಂಡಿಸಲಾಗಿದೆ.
ಹೀಗಾಗಿ, ಪೊಲೀಸರು ನಮ್ಮ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಹಾಗೂ ಸಭೆ ಸೇರುವ ಹಕ್ಕನ್ನು ನಿರಾಕರಿಸದಂತೆ ಖಚಿತಪಡಿಸಬೇಕು ಹಾಗೂ ಪ್ರತಿಭಟನೆಗೆ ಅವಕಾಶ ನೀಡುವಂತೆ ಆದೇಶಿಸಬೇಕು. ಪ್ರತಿಭಟಿಸುವ ಮೂಲಭೂತ ಹಕ್ಕನ್ನು ಚಲಾಯಿಸಿರುವ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಫೆಲೆಸ್ತೀನ್ ಪರ ಒಗ್ಗಟ್ಟಿನಿಂದ ಹಾಗೂ ಶಾಂತಿಯುತವಾಗಿ ಪ್ರತಿಭಟಿಸಿದ ಪ್ರತಿಭಟನಾಕಾರರ ವಿರುದ್ಧ ಪ್ರಾಥಮಿಕ ಮಾಹಿತಿ ವರದಿಗಳು ಏಕೆ ದಾಖಲಾಗಿವೆ ಎಂಬ ಕುರಿತು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.