ಉಪ ಚುನಾವಣೆ | ರಾಜ್ಯದ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆ
ಶಿಗ್ಗಾಂವಿಯಿಂದ ಕಣಕ್ಕಿಳಿಯಲಿರುವ ಬಸವರಾಜ ಬೊಮ್ಮಾಯಿ ಪುತ್ರ ಭರತ್
ಭರತ್ ಬೊಮ್ಮಾಯಿ/ಬಂಗಾರು ಹನುಮಂತು
ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ನಂತರ ತೆರವಾಗಿದ್ದ, ಈ ಕ್ಷೇತ್ರದಿಂದ ಅವರ ಪುತ್ರ ಭರತ್ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಟಿಕೆಟ್ ಲಭಿಸಿದೆ.
ಸಂಡೂರು ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಕಾಂಗ್ರೆಸ್ ಶಾಸಕ ಈ.ತುಕಾರಾಮ್, ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಈ ಕ್ಷೇತ್ರದಿಂದ ಬಿಜೆಪಿಯು ಬಂಗಾರು ಹನುಮಂತು ಅವರನ್ನು ಕಣಕ್ಕಿಳಿಸಿದೆ.
ಚನ್ನಪಟ್ಟಣ ಟಿಕೆಟ್ ಯಾರಿಗೆ?: ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿರುವ ಬೆನ್ನಲ್ಲೆ, ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.
ಚನ್ನಪಟ್ಟಣ ಕ್ಷೇತ್ರವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾದ ಹಿನ್ನೆಲೆಯಲ್ಲಿ ಅವರು ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದೀಗ ಚನ್ನಪಟ್ಟಣ ಕ್ಷೇತ್ರದಲ್ಲಿ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ನಡುವೆ ಟಿಕೆಟ್ಗಾಗಿ ಪೈಪೋಟಿ ಏರ್ಪಟಿದ್ದು, ಶತಾಯಗತಾಯ ಚನ್ನಪಟ್ಟಣ ಕ್ಷೇತ್ರದಿಂದ ಈ ಬಾರಿ ಕಣಕ್ಕಿಳಿಯಲೇಬೇಕು ಎಂದು ಯೋಗೇಶ್ವರ್ ನಿರ್ಧರಿಸಿದ್ದಾರೆ. ಅಲ್ಲದೇ, ಈ ಸಂಬಂಧ ತಮ್ಮ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸರಣಿ ಸಭೆಗಳನ್ನು ನಡೆಸಿದ್ದಾರೆ.