ಬಳ್ಳಾರಿಯಲ್ಲಿ ಬಾಣಂತಿ-ಮಗು ಸಾವು ಪ್ರಕರಣ: ಲೋಕಾಯುಕ್ತಕ್ಕೆ ಬಿಜೆಪಿ ದೂರು, ನ್ಯಾಯಾಂಗ ತನಿಖೆಗೆ ಪಟ್ಟು
ಬಳ್ಳಾರಿ: ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‍ಗೆ ಒಳಗಾಗಿದ್ದ ಕೂಡ್ಲಿಗಿಯ ಬಾಣಂತಿಯೊಬ್ಬರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ‘ವಿಮ್ಸ್ ಆಸ್ಪತ್ರೆ’ಯಲ್ಲಿ ನವಜಾತ ಶಿಶುವೊಂದು ಮೃತಪಟ್ಟಿದ್ದು ಸಾರ್ವಜನಿಕರ ಆತಂಕಕ್ಕೆ ಒಳಗಾಗಿದ್ದಾರೆ.
ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿರುವ ಬಿಜೆಪಿ ನಿಯೋಗ, ‘ಈ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ಬಾಣಂತಿಯರು ಹಾಗೂ ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಸಂತ್ರಸ್ತ ಕುಟುಂಬಗಳಿಗೆ ಕೂಡಲೇ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದೆ.
ಕೂಡ್ಲಿಗಿ ಮೂಲದ ಸುಮಯ್ಯ ಎಂಬವರು ನವೆಂಬರ್ 11ರಂದು ಹೆರಿಗೆಗೆಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರಿಗೆ ಸಿಸೇರಿಯನ್ ಮಾಡಲಾಗಿತ್ತು. ಆ ಬಳಿಕ ತೀವ್ರ ಅಸ್ವಸ್ಥಗೊಂಡ ಅವರನ್ನು ಬಳ್ಳಾರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್) ದಾಖಲಿಸಲಾಗಿತ್ತು ಎಂದು ಹೇಳಲಾಗಿದೆ.
ಬಹು ಅಂಗಾಂಗ ವೈಫಲ್ಯದ ಸಮಸ್ಯೆಗೆ ತುತ್ತಾಗಿದ್ದ ಸುಮಯ್ಯ ಅವರನ್ನು 24 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತಿತ್ತು. ಬಹುತೇಕ ಚೇತರಿಸಿಕೊಂಡಿದ್ದರೂ, ಮೂತ್ರಪಿಂಡ (ಕಿಡ್ನಿ) ಸಮಸ್ಯೆ ಪರಿಹಾರ ಆಗಿರಲಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲು ವಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ನಿರ್ಧರಿಸಿತ್ತು. ಆದರೆ ಗುರುವಾರ ರಾತ್ರಿ ಏಕಾಏಕಿ ರಕ್ತದೊತ್ತಡ ಕುಸಿದು ಅವರ ಆರೋಗ್ಯ ಏರುಪೇರಾಯಿತು. ಅಗತ್ಯ ಚಿಕಿತ್ಸೆ ಬಳಿಕವೂ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ನವಜಾತ ಶಿಶು ಮರಣ:
ವಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ನವಜಾತ ಶಿಶುವೊಂದು ಮೃತಪಟ್ಟಿದೆ. ಬಾಣಂತಿ ಗಂಗೋತ್ರಿ ಕುಟುಂಬಸ್ಥರು, ಇದು ವೈದ್ಯರ ನಿರ್ಲಕ್ಷ್ಯದಿಂದ ಆಗಿದೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ನಿರಾಕರಿಸಿರುವ ವಿಮ್ಸ್, ‘ಮಗು ಹೊಟ್ಟೆಯಲ್ಲಿರುವಾಗಲೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು' ಎಂದು ಸ್ಪಷ್ಟನೆ ನೀಡಿದ್ದಾರೆ.
ಲೋಕಾಯುಕ್ತಕ್ಕೆ ಬಿಜೆಪಿ ದೂರು:
ಬಳ್ಳಾರಿ ಹಾಗೂ ರಾಜ್ಯದ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸಾವು ಪ್ರಕರಣಗಳ ಸಂಬಂಧ ಲೋಕಾಯುಕ್ತಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಬೇಕು. ಬಾಣಂತಿಯರ ಸಾವಿನ ಹಿಂದಿರುವ ಕಾರಣ, ಕಳಪೆ ಔಷಧಿ ಖರೀದಿ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು’ ಎಂದು ಬಿಜೆಪಿ ನಿಯೋಗ ಕೋರಿದೆ.
ಆಸ್ಪತ್ರೆಯ ಆಡಳಿತವರ್ಗ, ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳು ಇದರ ಹಿಂದಿದ್ದು, ಘಟನೆಗೆ ಕಾರಣರಾದವರು ಕಾನೂನಿನಡಿ ಶಿಕ್ಷೆ ಎದುರಿಸುವಂತಾಗಬೇಕು. ಆರೋಗ್ಯ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯವನ್ನು ಸಹಿಸಲಾಗದು. ಸಂತ್ರಸ್ತ ಕುಟುಂಬಗಳಿಗೆ ಸಮರ್ಪಕ ಪರಿಹಾರ ಕೊಡಬೇಕು. ವೈದ್ಯಕೀಯ ಕ್ಷೇತ್ರಕ್ಕೆ ಅಗತ್ಯ ಆಡಳಿತಾತ್ಮಕ ಸುಧಾರಣೆ ತರಬೇಕು ಎಂದು ನಿಯೋಗ ಮನವಿ ಮಾಡಿದೆ.
‘ನಾನು ಈಗಾಗಲೇ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದೇನೆ. ಈ ಕುರಿತು ಲೋಕಾಯುಕ್ತಕ್ಕೆ ಪತ್ರ ಬರೆಯುತ್ತೇನೆ. ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡದೆ ಬಿಡುವುದಿಲ್ಲ. ಸಿಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಜಿಡಿಪಿಯಲ್ಲಿ ನಂ.1 ಎನ್ನುವ ಸಿಎಂ ಸಿದ್ದರಾಮಯ್ಯ, ಬಾಣಂತಿಯರ ಸಾವಿನಲ್ಲೂ ಕರ್ನಾಟಕ ನಂ.1 ಎಂದು ಹೇಳಲಿ’
-ಆರ್.ಅಶೋಕ್ ವಿಪಕ್ಷ ನಾಯಕ
‘ಬಳ್ಳಾರಿಯಲ್ಲಿ ಮತ್ತೊಂದು ಬಾಣಂತಿಯ ಸಾವಿಗೀಡಾಗಿರುವ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು’
-ಸಿದ್ದರಾಮಯ್ಯ, ಮುಖ್ಯಮಂತ್ರಿ
‘ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಪ್ರಕರಣಗಳಲ್ಲಿನ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ತಪ್ಪಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧ’
-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ