ಬಿಜೆಪಿ ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: "ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.
"ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ. ಅವರು ರಚನಾತ್ಮಕ ಸಲಹೆ ಕೊಟ್ಟರೆ ನಾವು ಸ್ವೀಕರಿಸಲು ಸಿದ್ಧ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಟ್ಯಾಂಕರ್ ಹಾಗೂ ಖಾಸಗಿಯವರನ್ನು ಸರಕಾರ ತನ್ನ ಸುಪರ್ದಿಗೆ ತೆಗೆದುಕೊಂಡು ಮಾಫಿಯಾ ತಡೆಗಟ್ಟಿದ್ದೇವೆ" ಎಂದರು.
"ಶೇಕಡಾ 50ರಷ್ಟು ಕೊಳವೆಬಾವಿಗಳು ಬರಿದಾಗಿದೆ. ಸಾವಿರಾರು ಟ್ಯಾಂಕರ್ ಗಳನ್ನು ನಾವು ನಿಯಂತ್ರಣಕ್ಕೆ ತೆಗೆದುಕೊಂಡು ನೀರಿನ ಮೂಲಗಳಿರುವ ಕಡೆಗಳಿಂದ ನೀರನ್ನು ಪೂರೈಸಲು ನಿರ್ಧರಿಸಲಾಗಿದೆ. ದೂರದಿಂದ ನೀರು ಪೂರೈಸುವ ಕಾರಣ ಟ್ಯಾಂಕರ್ ನೀರಿನ ದರ ನಿಗಧಿಯ ನಿರ್ಧಾರವನ್ನು ಅಧಿಕಾರಿಗಳಿಗೆ ಬಿಟ್ಟಿದ್ದೇವೆ. ಇನ್ನು ರಾಜ್ಯದಲ್ಲಿ ಖಾಲಿ ಇರುವ ದೊಡ್ಡ ಹಾಲಿನ ಟ್ಯಾಂಕರ್ ಗಳನ್ನ ನೀರು ಪೂರೈಸಲು ಬಳಸಲಾಗುವುದು" ಎಂದು ತಿಳಿಸಿದರು.
ಕಾವೇರಿ ನೀರನ್ನು ಸಮರ್ಪಕವಾಗಿ ಪೂರೈಸಲಾಗುತ್ತಿದೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಮಾಧ್ಯಮಗಳಲ್ಲಿ ನೀರಿನ ಆಹಾಕಾರದ ಬಗ್ಗೆ ತೋರಿಸುತ್ತಿದ್ದೀರಿ. ಕೊಳವೆ ಬಾವಿಗಳು ಬತ್ತಿದಾಗ ಆಹಾಕಾರಾ ಉದ್ಭವಿಸುತ್ತದೆ. ನಾವು ನೀರು ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
ನೀರಿನ ಸಮಸ್ಯೆ ಬಗೆಹರಿಸುತ್ತೇವೆ:
ಖಾಸಗಿ ಟ್ಯಾಂಕರ್ ಗಳಿಗೆ ಸಿಗುವ ನೀರು ಸರಕಾರಕ್ಕೆ ಯಾಕೆ ಸಿಗುತ್ತಿಲ್ಲ ಎಂದು ಸಾರ್ವಜನಿಕ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, "ಖಾಸಗಿ ಟ್ಯಾಂಕರ್ ಗಳು ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸುತ್ತಿವೆ. ಸರಕಾರದ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ನೀರು ಪೂರೈಸಲಾಗುತ್ತಿದೆ. ದುರಸ್ತಿ ಇದ್ದ ಘಟಕಗಳನ್ನು ರಿಪೇರಿ ಮಾಡುತ್ತಿದ್ದೇವೆ. ಇನ್ನು ಮೂರ್ನಾಲ್ಕು ತಿಂಗಳು ಈ ಸಮಸ್ಯೆ ಇರುತ್ತವೆ. ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ನಮಗೆ ನೀರಿನ ಬೆಲೆ ಗೊತ್ತಿದೆ" ಎಂದು ತಿಳಿಸಿದರು.
ಮಾ.11ರ ನಂತರ ಅಭ್ಯರ್ಥಿಗಳ ಎರಡನೇ ಪಟ್ಟಿ
"ನಾವು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಹೈಕಮಾಂಡ್ ಗೆ ಹೆಸರು ರವಾನೆ ಮಾಡುತ್ತೇವೆ. ಮಾ.11ರಂದು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಟ್ಟಿ ಪ್ರಕಟಿಸುತ್ತಾರೆ" ಎಂದು ತಿಳಿಸಿದರು.
ಕುಮಾರಸ್ವಾಮಿ ಅವರು ಜನರಿಗೆ ಹೇಗೆ ಮುಖ ತೋರಿಸುತ್ತಾರೆ?
"ಈಗಿನ ರಾಜಕೀಯ ನೋಡಿ ಬಹಳ ನೋವಾಗುತ್ತಿದೆ. ಕುಮಾರಸ್ವಾಮಿ ಅವರ ಸರಕಾರವನ್ನು ಬೀಳಿಸಿದ ಯಡಿಯೂರಪ್ಪ, ಯೋಗೇಶ್ವರ್, ಮುನಿರತ್ನ ಅವರ ಜತೆಗೆ ಈಗ ಅವರು ತಬ್ಬಾಡುತ್ತಿದ್ದಾರೆ. ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂದು ಬಹಳ ವ್ಯಥೆಯಾಗುತ್ತಿದೆ. ನಾವು ಕುಮಾರಣ್ಣ ಅವರನ್ನು 5 ವರ್ಷ ಸಿಎಂ ಮಾಡಬೇಕು ಎಂದು ಮೈತ್ರಿ ಸರಕಾರ ಮಾಡಿದ್ದೆವು. ಆ ಸರಕಾರ ಬೇಳಿಸಿದವರ ಜೊತೆ ಈಗ ಸ್ನೇಹ ಬೆಳೆಸುತ್ತಿದ್ದಾರೆ. ಅವರ ವಕ್ತಾರರಾಗಿದ್ದಾರೆ. ಇದೆಲ್ಲವನ್ನೂ ನಿರ್ಧರಿಸಲು ಜನರಿಗೆ ಬಿಡುತ್ತೇನೆ" ಎಂದು ತಿಳಿಸಿದರು.