ಕಾಂಗ್ರೆಸ್ಗೆ ಮಾತ್ರ ಭವಿಷ್ಯ ಎಂದು ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಅರಿವಾಗಿದೆ : ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್(PC:X)
ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಭವಿಷ್ಯವಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅರಿವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಎನ್ಡಿಎ ಮೈತ್ರಿಕೂಟವನ್ನು ತಿರಸ್ಕರಿಸಿದ್ದಾರೆ. ಅದಕ್ಕೆ ಈ ಉಪಚುನಾವಣೆಯೇ ಸಾಕ್ಷಿ ಎಂದರು.
2023ರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೂ ಈ ಉಪಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿನ ಮತಗಳ ಅಂತರವನ್ನು ಗಮನಿಸಿದಾಗ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರದಲ್ಲಿ 50 ಸಾವಿರ ಮತಗಳು ಬದಲಾಗಿವೆ. ಚನ್ನಪಟ್ಟಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 16 ಸಾವಿರ ಮತಗಳನ್ನು ಪಡೆದಿದ್ದರು. ಈ ಉಪಚುನಾವಣೆಯಲ್ಲಿ 1.12 ಲಕ್ಷ ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ನಮಗೆ ಮತ ಹಾಕದಿದ್ದರೆ ಇಷ್ಟು ಪ್ರಮಾಣದಲ್ಲಿ ಮತಗಳು ವ್ಯತ್ಯಾಸವಾಗುತ್ತಿತ್ತೇ? ಎಂದು ಶಿವಕುಮಾರ್ ಹೇಳಿದರು.
ಬಿಜೆಪಿ ಅವಧಿಯಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ನೋಟೀಸ್ ನೀಡಿ ಈಗ ಅವರೇ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿಪಕ್ಷಗಳಿಗೆ ಬೇಕಾಗಿರುವುದು ಕೇವಲ ಪ್ರಚಾರ. ಅವರು ಪ್ರತಿಭಟನೆ ಮಾಡಿದಷ್ಟು ನಮಗೆ ಒಳ್ಳೆಯದು. ಅವರು ತಮ್ಮ ಮುಖಗಳನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ. ಗೋಮುಖ ವ್ಯಾಘ್ರರ ಸತ್ಯಾಂಶವನ್ನು ನಾವು ಬಿಚ್ಚಿಡುತ್ತೇವೆ ಎಂದರು.
ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಅಲ್ಲಿನ ಜನ ಪಹಣಿಯಲ್ಲಿ ವಕ್ಫ್ ನಮೂದಾಗಿರುವ ವಿಚಾರವಾಗಿ ಅರ್ಜಿ ತೆಗೆದುಕೊಂಡು ಹೋಗುತ್ತಿದ್ದರು. ನಾನು ಅದನ್ನು ಪರಿಶೀಲಿಸಿದಾಗ 2020ರಲ್ಲಿ ಅವರ ಪಹಣಿ ತಿದ್ದುಪಡಿಯಾಗಿದೆ. ಈಗ ಅದನ್ನು ಮನೆ ಮನೆಗೆ ತೋರಿಸುತ್ತಿದ್ದಾರೆ. ಬಿಜೆಪಿಯವರು ತಮ್ಮ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ವಿಚಾರವಾಗಿ ಹೋರಾಟ ಮಾಡುತ್ತಿದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಬಿಜೆಪಿಯಲ್ಲಿ ಎಷ್ಟೇ ಗುಂಪುಗಳಿದ್ದರೂ ನಮ್ಮ ಲೆಕ್ಕಕ್ಕೆ ಅವರು ಒಂದೇ ಗುಂಪು. ಜೆಡಿಎಸ್ ಚಿಹ್ನೆ ಬೇರೆಯಾದರೂ ಅವರೂ ಅದೇ ಗುಂಪು. ಜೆಡಿಎಸ್ ಅವರು ಕೂಡ ಹೋರಾಟ ಮಾಡಿ ನಮಗೆ ಪ್ರಚಾರ ನೀಡುವ ಪ್ರಯತ್ನದಲ್ಲಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.
ಮುಸಲ್ಮಾನರು ಹೇಗೆ ಮತ ಹಾಕುತ್ತಾರೆ : ಮುಸ್ಲಿಮರು ಕೈಕೊಟ್ಟಿದ್ದಕ್ಕೆ ನಮಗೆ ಹಿನ್ನಡೆಯಾಯಿತು ಎಂಬ ನಿಖಿಲ್ ಹೇಳಿಕೆ ನೀಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯವರ ಜತೆ ಸೇರಿದರೆ ಮುಸಲ್ಮಾನರು ಹೇಗೆ ಮತ ಹಾಕುತ್ತಾರೆ. ಮುಸ್ಲಿಮರನ್ನು ಎನ್ಡಿಎ ಮೈತ್ರಿಕೂಟ ವಿಶ್ವಾಸಕ್ಕೆ ಪಡೆದಿಲ್ಲ. ಹೀಗಿರುವಾಗ ಅವರು ಯಾಕೆ ಮತ ಹಾಕುತ್ತಾರೆ. ಎನ್ಡಿಎ ವತಿಯಿಂದ ಮುಸ್ಲಿಮರಿಗೆ ಟಿಕೆಟ್ ನೀಡಿದ್ದಾರಾ?, ಮಂತ್ರಿ ಮಾಡಿದ್ದಾರಾ? ಅವರಿಗಾಗಿ ಕಾರ್ಯಕ್ರಮ ಕೊಟ್ಟಿದ್ದಾರಾ? ಅವರಿಗಿದ್ದ ಶೇ.4ರಷ್ಟು ಮೀಸಲಾತಿ ಕಿತ್ತುಕೊಂಡಿದ್ದೀರಿ. ನಿಮಗೆ ಅವರ ಮತ ಕೇಳುವ ನೈತಿಕತೆಯೇ ಇಲ್ಲ. ನಿಖಿಲ್ ಚಿಕ್ಕ ಹುಡುಗ. ಅವನ ಅನುಭವದ ಬಗ್ಗೆ ನಾನು ಮಾತನಾಡುವುದಿಲ್ಲ’
-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ
ಜಿ.ಟಿ.ದೇವೇಗೌಡ ಮನನೊಂದಿದ್ದಾರೆ: ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ನ ಆಪರೇಷನ್ ಮಾಡಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ಜಿ.ಟಿ.ದೇವೇಗೌಡ ಹಿರಿಯ ನಾಯಕರು. ಆ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾದ್ದಾರೆ. ಜಿ.ಟಿ.ದೇವೇಗೌಡರು ಜೆಡಿಎಸ್ ಪಕ್ಷಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನಾವು ಈ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದೆವು. ಆದರೆ, ಅವರು ಕುಮಾರಣ್ಣ ಅವರನ್ನು ಸಿಎಂ ಮಾಡುತ್ತೇವೆ ಎಂದು ನಮ್ಮ ಆಹ್ವಾನ ತಿರಸ್ಕರಿಸಿದರು. ಈಗ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಅವರು ಮನನೊಂದಿದ್ದಾರೆ ಎಂದರು.