ಕೆ.ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಮದ್ಯ ಹಂಚಿಕೆ: ಬಿಜೆಪಿ ಮಂಡಲ ಅಧ್ಯಕ್ಷ ಉಚ್ಛಾಟನೆ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭಾವಿಕೆರೆ ಬಳಿ ಆಯೋಜಿಸಿದ್ದ ಸಂಸದ ಡಾ.ಕೆ.ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಸಾರ್ವಜನಿಕವಾಗಿ ಮದ್ಯವನ್ನು ಹಂಚಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನೆಲಮಂಗಲ ಮಂಡಳ ಅಧ್ಯಕ್ಷ ಜಗದೀಶ್ ಚೌಧರಿಯನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಜು.7ರಂದು ನೆಲಮಂಗಲದ ಭಾವಿಕೆರೆ ಬಳಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿರುವ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಬಹಿರಂಗವಾಗಿಯೆ, ಪೊಲೀಸರ ಸಮ್ಮುಖದಲ್ಲಿ ಸರತಿ ಸಾಲಿನಲ್ಲಿ ನಿಲ್ಲಿಸಿ ಮದ್ಯ ಹಂಚಿಕೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು, ಭಾವಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿತ್ತು.
‘ಈ ಘಟನೆ ಪಕ್ಷಕ್ಕೆ ಮುಜುಗರ ತಂದಿರುವುದು ಮತ್ತು ಪಕ್ಷದ ನೀತಿ, ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವುದು ಹಾಗೂ ಪಕ್ಷದ ಶಿಸ್ತಿನ ಸ್ಪಷ್ಟ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಜಗದೀಶ್ ಚೌಧರಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚನೆ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ’ ಎಂದು ಬೆಂ.ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ರಾಮಕೃಷ್ಣಪ್ಪ ಆದೇಶ ಹೊರಡಿಸಿದ್ದಾರೆ.