‘ವಕ್ಫ್ ಆಸ್ತಿ ವಿವಾದ’ ನ.4ಕ್ಕೆ ಬಿಜೆಪಿಯಿಂದ ಪ್ರತಿಭಟನೆ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ‘ವಕ್ಫ್ ಆಸ್ತಿ ವಿವಾದ ಸೃಷ್ಟಿಸಿರುವ ಸಚಿವ ಝಮೀರ್ ಅಹಮದ್ ಖಾನ್ರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ನ.4ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಪಕ್ಷದ ಮುಖಂಡರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.
ಬುಧವಾರ ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಈ ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕು. ರಾಜ್ಯದಲ್ಲಿ ಅಸ್ತಿತ್ವದ ಸರಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ ಎಂದು ದೂರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಝಮೀರ್ ಅಹಮದ್ರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ರೈತರ ಪರವಾಗಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ, ತಹಸಿಲ್ದಾರ್ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು. ಅಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ಕಬಳಿಸುವ ಹುನ್ನಾರ ನಡೆದಿದೆ ಎಂದು ಟೀಕಿಸಿದ್ದಾರೆ.
ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿದ್ದರಿಂದ ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ಶಿವಮೊಗ್ಗ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಚನಾತ್ಮಕ ಪ್ರತಿಪಕ್ಷವಾಗಿ ನಾವುಗಳು ರೈತರ ಪರವಾಗಿ ನಿಂತು ಸರಕಾರವನ್ನು ಎಚ್ಚರಿಸುವ ಹೋರಾಟಕ್ಕೆ ಇಳಿಯಬೇಕು ಎಂದು ತಿಳಿಸಿದ್ದಾರೆ.