BJP ಟಿಕೆಟ್ ವಂಚನೆ ಪ್ರಕರಣ: ಚೈತ್ರಾ, ಹಾಲಶ್ರೀ ಸೇರಿ 7 ಮಂದಿಯ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಸಿಸಿಬಿ ಸಿದ್ಧತೆ
ಆರೋಪಿಗಳು
ಬೆಂಗಳೂರು, ನ.2: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿದ್ದು, ಆರೋಪಿ ಚೈತ್ರಾ ಸೇರಿ 7 ಮಂದಿಯ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ವಂಚನೆ ಕುರಿತು 68 ಸಾಕ್ಷ್ಯಗಳನ್ನು ಕಲೆ ಹಾಕಿರುವ ಸಿಸಿಬಿ, ಆರೋಪಿಗಳ ವಿರುದ್ಧ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಈಗಾಗಲೇ ಪೊಲೀಸರು 4 ಕೋಟಿ 11 ಲಕ್ಷ ರೂಪಾಯಿ ಹಣ ಜಪ್ತಿ ಮಾಡಿದ್ದಾರೆ. ಪ್ರಾಥಮಿಕ ಸಾಕ್ಷ್ಯ, ಡಿಜಿಟಲ್ ಸಾಕ್ಷ್ಯ, ಸಾಂದರ್ಭಿಕ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಪ್ರಮುಖ ಆರೋಪಿಗಳಾದ ಚೈತ್ರಾ, ಶ್ರೀಕಾಂತ್, ಗಗನ್ ಕಡೂರು, ಹಾಲಶ್ರೀ, ಧನರಾಜ್ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ ಎಂದು ಸಿಸಿಬಿ ಮೂಲಗಳು ಹೇಳಿವೆ.
ದೂರುದಾರ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ಪಡೆಯಲಾದ ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ನ್ ಫೋನ್ ಗಳಿಂದ ರಿಟ್ರೀವ್ ಮಾಡಲಾದ ವರದಿಯನ್ನು ಕೂಡ ಚಾರ್ಜ್ಶೀಟ್ನಲ್ಲಿ ದಾಖಲಿಸಲಾಗಿದೆ. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.