ಅರ್ಹರ ಬಿಪಿಎಲ್ ಕಾರ್ಡು ರದ್ದು ಮಾಡಬಾರದು : ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಕೇಂದ್ರ ಸರಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು.
ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3253 ಕೋಟಿ ರೂ.ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದರು.
ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್ ಬಂಕ್ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್ಗಳ ತಪಾಸಣೆ ಮಾಡಲಾಗಿದೆ ಎಂದು ಮುನಿಯಪ್ಪ ಹೇಳಿದರು. ಪೆಟ್ರೋಲ್ ಬಂಕ್ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯ ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ ಎಂದು ಮುನಿಯಪ್ಪ ಮಾಹಿತಿ ನೀಡಿದರು.
ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಟಿ.ಎಚ್.ಎಂ.ಕುಮಾರ್, ಆಯುಕ್ತೆ ವಾಸಿರೆಡ್ಡಿ ವಿಜಯಜೋತ್ಸ, ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಕಾಂತ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್, ಕಾನೂನು ಮಾಪನ ಇಲಾಖೆ ನಿಯಂತ್ರಕಿ ಅನಿತಾ ಲಕ್ಷ್ಮೀ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.